ಅಲೆಮಾರಿ ಹಾಗೂ ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ವಿಜಯಪುರ: ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಹಾಗೂ ಅರಿವು ಮೂಡಿಸಿ ಸಮರ್ಪಕವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ-ಅರೆ ಅಲೆಮಾರಿ ಜನಾಂಗಕ್ಕೆ ದೊರೆಯುವ ಸೌಲಭ್ಯಗಳನ್ನು ದೊರಕಿಸಿ ಆರ್ಥಿಕ ಸ್ವಾವಲಂಬನೆಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೊತ್ಸಾಹ ಧನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿವೇತನ ಹಾಗೂ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಸೇರಿದಂತೆ ಜನಾಂಗದ ಆರ್ಥಿಕ ಸಬಲತೆಗೆ ಮೂಲಭೂತ ಸೌಕರ್ಯ ಹಾಗೂ ವಸತಿ ಸೌಲಭ್ಯವನ್ನು ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
೨೦೨೨-೨೦೨೩ನೆ ಸಾಲಿನಲ್ಲಿ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ೧೩೬ ಮನೆಗಳು ಮಂಜೂರಾಗಿವೆ. ಪ್ರತಿ ತಾಲೂಕಿನಲ್ಲಿ ಅರ್ಜಿ ಆಹ್ವಾನಿ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿಗೆ ಕ್ರಮ ವಹಿಸಬೇಕು. ಈ ಕುರಿತು ಜನಾಂಗದವರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸಾಂಸ್ಕೃತಿಕ ಚಟುವಟಿಕೆ ಸಮುದಾಯ ಭವನ, ಆಶ್ರಮ ಶಾಲೆ ಮತ್ತು ದೇವಸ್ಥಾನ ನಿರ್ಮಾಣ ಮಾಡಿ ಜನಾಂಗಕ್ಕೆ ಸಹಾಯ ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಲಾಯಿತು.
ಅಲೆಮಾರಿ ಜನಾಂಗದವರು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು. ಸರ್ಕಾರದ ಸ್ವಯಂ ಉದ್ಯೋಗ ಸಾಲ, ಗುಂಪುಸಾಲ, ಹಾಗೂ ಆರೋಗ್ಯ ಕಾರ್ಡ, ಹಾಗೂ ಪ್ರೋತ್ಸಹಧನದಂತಹ ಸೌಲಭ್ಯಗಳನ್ನು ಆ ಸಮುದಾಯಗಳಿಗೆ ಒದಗಿಸಬೇಕು. ಅಂಗನವಾಡಿಗಳಲ್ಲಿ ಹಾಗೂ ಶಾಲೆಗಳಲ್ಲಿರುವ ಅಲೆಮಾರಿ ಜನಾಂಗದ ಮಕ್ಕಳ ಮಾಹಿತಿ ಪಡೆದು, ಅಲೆಮಾರಿ ಜನಾಂಗಕ್ಕೆ ಸೇರಿದ ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ನೆರವು ಹಾಗೂ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆ ಅಧಿಕಾರಿ ಈರಣ್ಣ ಆಶಾಪುರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

