3 ತಿಂಗಳೊಳಗೆ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸಿಎಂ ಸ್ಪಷ್ಠ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಫೆ.8) ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12,126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.
ನವೆಂಬರ್ 27,2023ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98ರಷ್ಟು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ತಾಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ ಎಂದು ಸಿಎಂ ಹೇಳಿದ್ದಾರೆ.
ಕಾನೂನು ಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

