ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಸೂಚನೆ
ವಿಜಯಪುರ: ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಕೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಅನಿಷ್ಟ ಪದ್ದತಿಗಳಾದ ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹಗಳನ್ನು ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಎರಡನೇ ದಿವಸದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫ ಪೋಕ್ಸೋ ಕಾಯ್ದೆ-೨೦೧೨ ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬, ಆರ್.ಟಿ.ಇ ಕಾಯ್ದೆ-೨೦೦೯ರ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಬಗ್ಗೆ ಕಳಕಳಿ ಹೊಂದಬೇಕು. ಅಂಗನವಾಡಿ, ಶಾಲೆ, ಗ್ರಾಮ ಪಂಚಾಯಿತಿ ತಾಲೂಕ ಪಂಚಾಯಿತಿ ಸೇರಿದಂತೆ ಮಕ್ಕಳ ಹಕ್ಕುಗಳ ಕಾಯ್ದೆಗಳ ಅನುಷ್ಠಾನಕ್ಕಾಗಿರುವ ಗ್ರಾಮ ಮಟ್ಟದಲ್ಲಿನ ಮಕ್ಕಳ ಸಮಿತಿಗಳು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳು ಸಕಾಲದಲ್ಲಿ ನಿಮಿತವಾಗಿ ಜಾಗೃತಿ ಸಭೆಗಳನ್ನು ಜರುಗಿಸುವ ಮೂಲಕ ಬಾಲ್ಯವಿವಾಹ ನಿಷೇಧ, ಕಾರ್ಮಿಕ ಪದ್ಧತಿ ತಡೆಯಲೂ ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸಬೇಕು ಎಂದರು.
ವಿವಿಧ ಇಲಾಖೆಗಳು ಮಕ್ಕಳ ಕ್ಷೇತ್ರದಲ್ಲಿ ತಮ್ಮಿಂದ ಸಾಧ್ಯವಾದಷ್ಟು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಇದಕ್ಕೆ ಹಲವಾರು ಇಲಾಖೆಗಳು ಕೈ ಜೋಡಿಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಮಾತನಾಡಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ೧೮ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಯಬೇಕು.
ಗ್ರಾಮ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಾಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಶಾಲಾ ಮುಖ್ಯೋಪಾಧ್ಯಾಯರು ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಾಗಿ ಮಾಹಿತಿ ಸಂಗ್ರಹಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆ ತರಬೇಕು. ಶಿಕ್ಷಕರು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು. ಶಿಕ್ಷಕರಾಗಿ ಪೋಷಕರಾಗಿ ಕಾರ್ಯನಿರ್ವಹಿಸಬೇಕು. ಒಂದು ವೇಳೆ ಪ್ರಕರಣಗಳು ಕಂಡು ಬಂದರೆ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಮಕ್ಕಳ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಾಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ರಾಘವೇಂದ್ರ ಎಚ್.ಸಿ ಮಾಹಿತಿ ನೀಡಿದರು.
ಈ ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ, ಗ್ರಾಮ, ತಾಲೂಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

