ಸಂವಿಧಾನ ಜಾಗೃತಿ ಜಾಥಾದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ
ವಿಜಯಪುರ: ದೇಶದ ಸಂವಿಧಾನದ ಮೂಲಭೂತ ಹಕ್ಕುಗಳ ಸಂವಿಧಾನದ ಆಶಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ ೨೬ ರಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
ರವಿವಾರ ಸಿಂದಗಿ ತಾಲೂಕಿನ ಯರಗಲ ಬಿ.ಕೆ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರು, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಮಾತನಾಡಿದ ಅವರು, ಸಂವಿಧಾನದ ಆಶಯಗಳ ಕುರಿತು ಪ್ರತಿಯೊಬ್ಬರಲ್ಲೂ ತಿಳುವಳಿಕೆ ಮೂಡಬೇಕು. ಈ ನಿಟ್ಟಿನಲ್ಲಿ ಯರಗಲ ಬಿ.ಕೆ ಗ್ರಾಮ ಪಂಚಾಯತ್‌ನಲ್ಲಿ ಜರುಗುತ್ತಿರುವ ಸಂವಿಧಾನ ಜಾಗೃತಿ ಜಾಥಾ ಚಟುವಟಿಕೆಗಳು ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ. ಸಂವಿಧಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಈ ಕಾರ್ಯ ಯಶಸ್ವಿಯಾಗಿದೆ ಎಂದು ಹೇಳಿದರು.
ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ,ತಹಸೀಲ್ದಾರ್‌ರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಜಾಥಾ ಚಿಕ್ಕ ಯರಗಲ್‌ದಿಂದ ಯರಗಲ್ ಬಿಕೆ ಗ್ರಾಮ ಪಂಚಾಯಿತಿ ರಸ್ತೆ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು ವಿದ್ಯಾರ್ಥಿಗಳು ಮತ್ತು ವಿವಿಧ ಕಲಾ ತಂಡಗಳ ಮೂಲಕ ನೃತ್ಯ ಪ್ರದರ್ಶನದೊಂದಿಗೆ ಮೆರವಣಿಗೆ ಸಾಗಿತು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಲಾಯಿತು. ಚಿತ್ರಕಲೆ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಸ್ವಸಹಾಯ ಸಂಘಗಳ ಮುಖ್ಯಸ್ಥರು, ಆಶಾ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.