ವಿವಿಧ ಸ್ಪರ್ಧಾತ್ಮಕ ತರಬೇತಿ ಪ್ರವೇಶ ಪರೀಕ್ಷೆವ್ಯವಸ್ಥಿತವಾಗಿ ಜರುಗಿಸಲು ರಾಜಶೇಖರ ಡಂಬಳ ಸೂಚನೆ
ವಿಜಯಪುರ: ಕರ್ನಾಟಕ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ೬ನೇ ತರಗತಿಗೆ ಪ್ರವೇಶಾತಿಗಾಗಿ ಪ್ರವೇಶ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ,ಹಿಂದುಳಿದ ವರ್ಗಗಳ ಇಲಾಖೆಯಿಂದ ಯುಪಿಎಸ್ ಸಿ,ಕೆ.ಎಎಸ್,ಗ್ರೂಪ್ ಸಿ,ಎಸ್ ಎಸ್ ಸಿ,ಬ್ಯಾಂಕಿಂಗ್,ಆರ್ ಆರ್ ಬಿ ಪರೀಕ್ಷೆಗಳಿಗೆ ತರಬೇತಿಗಾಗಿ ಪ್ರವೇಶ ಪರೀಕ್ಷೆಗಾಗಿ ಫೆ.೧೮ ರಂದು ವಿಜಯಪುರ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗಳು ವ್ಯವಸ್ಥಿತವಾಗಿ ಜರುಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಅವರು, ಫೆ.೧೮ ರಂದು ೬ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಜಿಲ್ಲೆಯ ಹತ್ತು ತಾಲೂಕಿನ ೩೯ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೦೧ರವರೆಗೆ ಪರೀಕ್ಷೆ ನಡೆಯಲಿದ್ದು ಒಟ್ಟು ೧೪,೦೪೮ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಸಮಾಜ ಕಲ್ಯಾಣ,ಹಿಂದುಳಿದ ವರ್ಗಗಳ ಇಲಾಖೆಯಿಂದ ಯುಪಿಎಸ್ಸಿ,ಕೆ.ಎಎಸ್,ಗ್ರೂಪ್ ಸಿ,ಎಸ್ ಎಸ್ಸಿ,ಬ್ಯಾಂಕಿಂಗ್,ಆರ್ ಆರ್ ಬಿ ಪರೀಕ್ಷೆಗಳಿಗೆ ತರಬೇತಿಗಾಗಿ ಪ್ರವೇಶ ಪರೀಕ್ಷೆಯು ವಿಜಯಪುರ ನಗರದ ೦೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ ಬೆಳಗಿನ ಅವಧಿಯ ಪರೀಕ್ಷೆಗೆ ೩೬೭೩ ಹಾಗೂ ಮಧ್ಯಾಹ್ನದ ಅವಧಿಗೆ ೨೫೯೧ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ರವಾನೆ, ಪರೀಕ್ಷಾ ಕೇಂದ್ರದಲ್ಲಿನ ಅಗತ್ಯ ಸಿದ್ಧತೆ ಕುರಿತು ಪರಿಶೀಲನೆ ನಡೆಸಬೇಕು. ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಕೈಗೊಳ್ಳಬೇಕು. ಮೇಲ್ವಿಚಾರಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಚಂದ್ರಶೇಖರ, ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕ ಹಣಮಂತ ಕಾಲತಿಪ್ಪಿ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
