ವಿಜಯಪುರ: ಮಾರ್ಚ ೩ ರಿಂದ ೬ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪೋಲಿಯೊವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನವಜಾತ ಶಿಶುವಿನಿಂದ ಹಿಡಿದು ೫ ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ಇದು ರಾಷ್ಟ್ರೀಯ ಕಾರ್ಯಕ್ರಮ ಆಗಿರುವುದರಿಂದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವ ಕಾರಣಕ್ಕೂ ಮಕ್ಕಳು ಪೋಲಿಯೊ ಲಸಿಕೆ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ೨೦೨೪ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದರು.
ಪೋಲಿಯೋ ಲಸಿಕೆಯನ್ನು ಶೀತಲೀಕರಣ ಮಾಡಬೇಕು. ಅವುಗಳನ್ನು ಎಲ್ಲಾ ಕಡೆ ಸೂಕ್ತ ರೀತಿಯಲ್ಲಿ ಸರಬರಾಜು ಮಾಡಬೇಕು. ಯಾವುದೇ ಕಾರಣಕ್ಕೂ ಮಕ್ಕಳು ಲಸಿಕೆ ವಂಚಿತರಾಗಬಾರದು. ಜನನಿಬಿಡ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ಪ್ರಯಾಣ ಮಾಡುತ್ತಿರುವ ಮಕ್ಕಳಿಗೂ ಲಸಿಕೆ ನೀಡುವುದಕ್ಕಾಗಿ ತಂಡವನ್ನು ರಚಿಸಿ ನಿಲ್ದಾಣಗಳಲ್ಲಿ ಪೋಲಿಯೊ ಲಸಿಕಾ ಕೇಂದ್ರಗಳನ್ನು ತೆರೆಯಬೇಕು ಎಂದು ಹೇಳಿದರು.
ಪೋಲಿಯೋ ಕುರಿತು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಭಿತ್ತಿಪತ್ರ, ಪೋಸ್ಟರ್ ಮೂಲಕ ಪೋಲಿಯೋ ಲಸಿಕೆ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು ಗ್ರಾಮೀಣ ಪ್ರದೇಶದಲ್ಲಿ ಪೋಲಿಯೊ ಬಗ್ಗೆ ಜಾಗೃತಿ ಮೂಡಿಸಲು ಡಂಗೂರ ಸಾರಿಸಬೇಕು. ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು.
ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡಲು ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ್ ಅಧಿಕಾರಿಗಳು , ಅಂಗನವಾಡಿ, ಸಾರಿಗೆ ಇಲಾಖೆ, ಆಶಾ ಕಾರ್ಯರ್ತೆಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳ್ಳಿ ,ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಿಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

