ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿಗಳ ಕೇಸ್ವಾನ್ ಸಭಾಂಗಣದಲ್ಲಿ ಮುಂಬರುವ ಲೋಕಸಭಾ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದ ಪೂರ್ವಭಾವಿ ಸಿದ್ಧತೆಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಲ್ಲಿ ಸೂಕ್ತ ಗಾಳಿ-ಬೆಳಕಿನ ವ್ಯವಸ್ಥೆ, ವಿಕಲಚೇತನ ಮತದಾರರಿಗೆ ರ‍್ಯಾಂಪ್ ವ್ಯವಸ್ಥೆ, ಬೇಸಿಗೆ ಇರುವುದರಿಂದ ಮತದಾರರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಮತಗಟ್ಟೆ ಕಟ್ಟಡ ಸ್ಥಿತಿಗತಿ, ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳು ಇರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಚುನಾವಣೆಗೆ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ವರದಿ ನೀಡಬೇಕು. ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳು ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಪೂರ್ವಭಾವಿಯಾಗಿ ಪರಿಶೀಲನೆ ನಡೆಸಬೇಕು. ಮತಗಟ್ಟೆಗಳಲ್ಲಿ ಯಾವುದಾದರೂ ಸಣ್ಣ ಪುಟ್ಟ ದುರಸ್ತಿಗಳಿದ್ದಲ್ಲಿ ತಮ್ಮ ಹಂತದಲ್ಲಿಯೇ ದುರಸ್ತಿಗೊಳಿಸಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಚುನಾವಣಾ ಕಾರ್ಯ ಅತ್ಯಂತ ಜವಾಬ್ದಾರಿಯುತವಾಗಿರುವುದರಿಂದ ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರೊಂದಿಗೆ ಯಾವುದೇ ಲೋಪಕ್ಕೆ ಅವಕಾಶ ನೀಡದೇ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳು ಎಲ್ಲ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಇರುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಸಭೆ ನಡೆಸಬೇಕು. ಈಗಾಗಲೇ ಚುನಾವಣೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳಿಗೆ ತರಬೇತಿ ಸಹ ನೀಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಾ ತಹಶೀಲ್ದಾರರು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

