ಅಕ್ಕಮಹಾದೇವಿ ಮಹಿಳಾ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಮತ
ವಿಜಯಪುರ: ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಬಹಳ ಮುಖ್ಯ. ಆ ದೇಶದ ಮಹಿಳೆಯರು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಪಾಲ್ಗೊಂಡಾಗ ಮಾತ್ರ ಯಾವುದೇ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೧೫ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಹೇಳಿದ್ದರು, ನೀವು ಸಮಾಜದ ಪ್ರಗತಿಯ ಬಗ್ಗೆ ನಿಖರವಾಗಿ ತಿಳಿದುಕೊಳ್ಳಬೇಕಾದರೆ, ಆ ಸಮಾಜದ ಮಹಿಳೆಯರ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಿ. ಇಂದಿನ ಮಹಿಳೆಯರು ಕೌಟುಂಬಿಕ ಮತ್ತು ಸಾಮಾಜಿಕ ಜವಾಬ್ದಾರಿಗಳ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ ಎಂದರು.
ಲಿಂಗ ಸಮಾನತೆಯ ತತ್ವವನ್ನು ಭಾರತೀಯ ಸಂವಿಧಾನದ ಪೀಠಿಕೆ, ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು ಮತ್ತು ನಿರ್ದೇಶನ ತತ್ವಗಳಲ್ಲಿ ಪ್ರತಿಪಾದಿಸಲಾಗಿದೆ. ಸಂವಿಧಾನವು ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ನೀಡುವುದು ಮಾತ್ರವಲ್ಲದೆ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯಕ್ಕೆ ಹಕ್ಕುಗಳನ್ನು ನೀಡುತ್ತದೆ ಎಂದು ಹೇಳಿದರು.
ಮಹಿಳೆಯರ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ರಕ್ಷಿಸಲು, ೧೯೯೦ ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವನ್ನು ಸ್ಥಾಪಿಸಲಾಯಿತು. ಭಾರತೀಯ ಸಂವಿಧಾನದ ೭೩ ಮತ್ತು ೭೪ನೇ ತಿದ್ದುಪಡಿಗಳ ಮೂಲಕ ಮಹಿಳೆಯರಿಗೆ ಪಂಚಾಯತ್ ಮತ್ತು ಪುರಸಭೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾನಗಳ ಮೀಸಲಾತಿಯನ್ನು ಒದಗಿಸಲಾಗಿದೆ.
ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಮತ್ತು ಅವರಿಗೆ ಅಭಿವೃದ್ಧಿ ಮತ್ತು ಭದ್ರತೆಗೆ ಅವಕಾಶಗಳನ್ನು ಒದಗಿಸಲು ವಿವಿಧ ಯೋಜನೆಗಳನ್ನು ಪ್ರಾರಂಭಿಸಿದೆ. ಬೇಟಿ ಬಚಾವೋ ಬೇಟಿ ಪಢಾವೋ, ವರ್ಕಿಂಗ್ ವುಮೆನ್ ಹಾಸ್ಟೆಲ್, ಒನ್-ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳಾ ಪೊಲೀಸ್ ಸ್ವಯಂಸೇವಕರು, ಉಜ್ವಲಾ ಯೋಜನೆ, ಮಹಿಳಾ ಶಕ್ತಿ ಕೇಂದ್ರ ಮತ್ತು ಇತರ ಹಲವು ಯೋಜನೆಗಳ ಮೂಲಕ ಭಾರತ ಸರ್ಕಾರವು ಹೆಚ್ಚು ಅಂತರ್ಗತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಈ ಮಹಿಳಾ ವಿಶ್ವವಿದ್ಯಾಲಯವು ಶಿಕ್ಷಣದ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದ ವಿಷಯವಾಗಿದೆ, ಇದಕ್ಕಾಗಿ ವಿಶ್ವವಿದ್ಯಾಲಯದ ಕುಟುಂಬದ ಎಲ್ಲ ಸದಸ್ಯರಿಗೆ ಅಭಿನಂದನೆಗಳು. ಪದವಿ ಸ್ವೀಕರಿಸಿದ ಎಲ್ಲಾ ವಿದ್ಯಾರ್ಥಿನಿಯರು ದೇಶವನ್ನು ಸರ್ವೋಚ್ಚ ಎಂದು ಪರಿಗಣಿಸಿ, ದೇಶದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ: ಬಿ.ಕೆ.ತುಳಸಿಮಾಲಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹರಿಯಾಣದ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಮಕುಲಪತಿ ಪ್ರೊ: ಸುಷ್ಮಾ ಯಾದವ ವಿಡಿಯೋ ಕಾನ್ಫರೆನ್ಸ್ ಮೂಲಕ ಘಟಿಕೋತ್ಸವ ಭಾಷಣ ಮಾಡಿದರು.
ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್ ಅಪ್ಪಾ ಹಾಗೂ ಡಾ.ಸಂಧ್ಯಾ ಪುರೇಚ ಅವರಿಗೆ ಗೌರವಾನ್ವಿತ ರಾಜ್ಯಪಾಲರು ಮತ್ತು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಥಾವರಚಂದ್ ಗೆಹ್ಲೋಟ್ ಅವರಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ವಿವಿಧ ಸ್ನಾತಕ-ಸ್ನಾತಕೋತ್ತರ ೭೭ ವಿದ್ಯಾರ್ಥಿನಿಯರಿಗೆ ೮೦ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ೪೮ ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಎಚ್.ಎಂ.ಚಂದ್ರಶೇಖರ, ಪ್ರೊ: ಓಂಕಾರ ಕಾಕಡೆ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

