’ಕೆಫೆ ಸ್ಪೋಟದ ಹಿಂದೆ ತಮಿಳರು’ ಹೇಳಿಕೆ | ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ | ಡಿಎಂಕೆ ದೂರು
ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ತಮಿಳರ ವಿರುದ್ದ ದ್ವೇಷ ಭಾಷಣ ಮಾಡುವ ಮೂಲಕ ಶೋಭಾ ಕರಂದ್ಲಾಜೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಅವರು ಬುಧವಾರ (ಮಾ.20) ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಪಟ್ಟಂತೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು 48 ಗಂಟೆಗಳ ಒಳಗೆ ವರದಿ ನೀಡಬೇಕು ಎಂದು ಆದೇಶಿಸಿದೆ.
ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, “ತರಬೇತಿ ಪಡೆದು ತಮಿಳುನಾಡಿನಿಂದ ಬರುತ್ತಾರೆ. ಇಲ್ಲಿ ಬಂದು ಬಾಂಬ್ ಹಾಕುತ್ತಾರೆ. ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ಎರಚಿದ್ದ” ಎಂದು ಹೇಳಿದ್ದರು.

