ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ‘ತುಂಬಿದ ಕೊಡ’ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು ಎಂದು ಕಾಂಗ್ರೆಸ್’ಗೆ ಬಿಜೆಪಿ ತಿರುಗೇಟು ನೀಡಿದೆ.
ಪತ್ರಿಕೆಯಲ್ಲಿ ‘ಚೊಂಬು’ ಜಾಹೀರಾತು ನೀಡುವ ಮೂಲಕ ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್ ನೇರ ದಾಳಿ ಮಾಡಿದ್ದು, ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು! ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿ ಎಂದು ಮತಯಾಚನೆ ಮಾಡಿದೆ.
ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು. ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುವ ಚೊಂಬು, ತೆರಿಗೆ ಹಂಚಿಕೆಯಲ್ಲಿ ಚೊಂಬು, ರೈತರ ಆದಾಯ ಡಬಲ್ ಮಾಡುವ ಚೊಂಬು, ಬರ/ನೆರೆ ಪರಿಹಾರದ ಚೊಂಬು, 7 ಜನ ಬಿಜೆಪಿ/ಜೆಡಿಎಸ್ ಸಂಸದರು ರಾಜ್ಯಕ್ಕೆ ನೀಡಿದ ಕೊಡುಗೆ ಕೇವಲ ಚೊಂಬು, ಈ ಚುನಾವಣೆಯಲ್ಲಿ ಬಿಜೆಪಿಗೆ ನಾವು ನೀಡೋಣ ಇದೇ ಚೊಂಬು, ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ.. ಎಂದು ಜಾಹೀರಾತು ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಇದೇ ಜಾಹೀರಾತನ್ನು ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ಹತ್ತು ವರ್ಷಗಳ ಆಡಳಿತದಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ದೊಡ್ಡ ಚೊಂಬು. 27 ಜನ ಬಿಜೆಪಿ / ಜೆಡಿಎಸ್ ಸಂಸದರ ಕೊಡುಗೆಯೂ ಚೊಂಬು. ಹಾಗಾಗಿ ಈ ಚುನಾವಣೆಯಲ್ಲಿ ನಾವೆಲ್ಲರೂ ಬಿಜೆಪಿಗೆ ಇದೇ ಚೊಂಬು ನೀಡೋಣ ಎಂದು ಪೋಸ್ಟ್ ಮಾಡಿದ್ದಾರೆ.
ಈ ಜಾಹೀರಾತಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಿರುಗೇಟು ನೀಡಿದ್ದು, ಕಾಂಗ್ರೆಸ್ಸಿಗರೇ, ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ‘ತುಂಬಿದ ಕೊಡ’ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು. ಬೆಳೆ ಒಣಗಿಸಿ ರೈತರಿಗೆ ಚೊಂಬು ಕೊಟ್ಟವರು ನೀವು. ಇದ್ದ ಬದ್ದ ಹಣವನ್ನೆಲ್ಲ ಖಾಲಿಮಾಡಿಕೊಂಡು ಪರಿಶಿಷ್ಟರ/ ಹಿಂದುಳಿದವರ ಕಲ್ಯಾಣಕ್ಕೆ ಮೀಸಲಾದ ಹಣವನ್ನೂ ವರ್ಗಾಯಿಸಿಕೊಂಡು ಶೋಷಿತರಿಗೆ ಚೊಂಬು ಕೊಟ್ಟವರು ನೀವು. ಕುಡಿಯುವ ನೀರೂ ಒದಗಿಸಲಾರದೇ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಅಲೆದಾಡುವ ಸ್ಥಿತಿ ತಂದವರು ನೀವು. ನಿರುದ್ಯೋಗಿಗಳಿಗೆ ಯುವನಿಧಿ ಹೆಸರಲ್ಲಿ ಖಾಲಿ ಚೊಂಬು ಕೊಟ್ಟವರು ನೀವು. ದೇಶದಲ್ಲಿ ಕಾಣದ ‘ಕೈ’ ಸ್ಥಿತಿ ತಲುಪುತ್ತಿರುವ ನಿಮಗೆ ಕೆಲವೇ ದಿನಗಳಲ್ಲಿ ಜನರೇ ನೀಡಲಿದ್ದಾರೆ ಖಾಲಿ ಚೊಂಬು ಎಂದು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

