ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆಂದು ರಾಜ್ಯ ಬಿಜೆಪಿ ಹೇಳಿದೆ.
ಬರ ಪರಿಹಾರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಪ್ರಧಾನಿ ಮೋದಿಯವರನ್ನು ಕೊಂಡಾಡಿದೆ.
ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ. ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದೆ.
ಇದೇ ವೇಳೆ ಸುರ್ಜೇವಾಲಾ ವಿರುದ್ಧವೂ ವಾಗ್ದಾಳಿ ನಡೆಸಿ, ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ, ಹಣವಿಲ್ಲ ಎಂದು ಕೂತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ. ಎಟಿಎಂ ಸರ್ಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ ಎಂದು ಪ್ರಶ್ನಿಸಿದೆ.
ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರ್ಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತ, ಅವರ ಸೇವೆ ಮಾಡುತ್ತ, ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ ಎಂದು ಕಿಡಿಕಾರಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

