ವಿಜಯಪುರ: ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು.
ಅವರು ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ ೨೧ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೈಹಿಕ, ಮಾನಸಿಕ ಸದೃಢತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಯೋಗ ರೂಢಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬಹುದು.
ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ. ಜೂನ್೨೧ ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ದೇಶಗಳು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಸಾಮೂಹಿಕ ಯೋಗಾಭ್ಯಾಸ:
‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ ೧೦ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ ೪೫ ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿಸಲಾಯಿತು. ಶ್ರೀಮತಿ ಸುನೀತಾ ಬಿರಾದಾರ ಅವರು ಯೋಗಾಸನ ಹಾಗೂ ಚಂದ್ರಶೇಖರ ಮತ್ತು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಗೀತಾಂಜಲಿ ದಾಸರ್ ಅವರು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ರಾಮನಗೌಡ ಎಸ್. ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ್ ಮಾನವರ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಕರ್ನಾಟಕ ರಿಸರ್ವ ಬಟಾಲಿಯನ್, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾರತಿ ಕುಂದನಗಾರ ತಂಡದಿಂದ ನಾಡಗೀತೆ ಪ್ರಸ್ತುತಪಡಿಸಲಾಯಿತು. ವೈದ್ಯಾಧಿಕಾರಿ ಡಾ. ವಿದ್ಯಾವತಿ. ಎಂ. ಅಥಣಿ ಪ್ರಾರ್ಥನೆ ಗೀತೆ ಹಾಡಿದರು. ಡಾ. ಬಿ.ಎನ್. ವಗದರ್ಣಿ ಸ್ವಾಗತಿಸಿದರು. ಡಾ. ವಿಜಯ ಮಹಾಂತೇಶ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

