ಪ.ಜಾತಿ-ಪಂಗಡದ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ
ವಿಜಯಪುರ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ ಅನುಸರಣಾ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆ ಜಾಗೃತಿಗಾಗಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಕ್ಕೆ ಕ್ರಮ ವಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗಗಳಿಗೆ ಸರ್ಕಾರದಿಂದ ದೊರೆಯುವ ಸಹಾಯ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಇಲಾಖೆಗಳಲ್ಲಿ ಮೀಸಲಿರುವ ಅನುದಾನದ ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಸಹಾಯ-ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸ್ತುತ ವರ್ಷದಲ್ಲಿ ೪೬ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ಧನ ಮಂಜೂರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ವಿವಿಧ ಸದಸ್ಯರು, ಸರ್ಕಾರಿ ಅಭಿಯೋಜಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

