ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ
ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಏಳನೇ ವೇತನ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸುವದು, ಎನ್ಪಿಎಸ್ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸುವದು, ಆರೋಗ್ಯ ಸಂಜೀವಿನ ಯೋಜನು ಅನುಷ್ಠಾನಗೊಳಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರಿ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ನೇತೃತ್ವದಲ್ಲಿ ಶುಕ್ರವಾರ ನೌಕರ ಬಾಂಧವರು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ರಾಜ್ಯದಲ್ಲಿ ೨.೬೦ ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆಗೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿಎಸ್ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳಾದ ರಾಜ್ಯ ೭ ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಬೇಕು. ಸಂಘದ ಮತ್ತೊಂದು ಪ್ರಮುಖ ಬೇಡಿಕೆಯಾಗಿರುವ ನೂತನ ಪಿಂಚಣಿಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಲುವಾಗಿ ಹಿಂದು ಸರ್ಕಾರ ಇತರೇ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ಸಮಿತಿ ರಚಿಸಿತ್ತು. ಇದುವರೆಗೂ ಸಮಿತಿಯುವ ಒಂದು ಸಭೆಯನ್ನು ನಡೆಸಿಲ್ಲ. ಇದರ ಬಗ್ಗೆ ಇದುವರೆಗೂ ಯಾವುದೇ ಪ್ರಕ್ರಿಯೆ ನಡೆಸಿಲ್ಲ. ರಾಜ್ಯದ ಎನ್ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವದರಿಂದ ಎನ್ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರ ಜವಾಬ್ದಾರಿಯಾಗಿದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸ್ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ಬಂದಿದೆ. ಅದರಂತೆ ನಮ್ಮ ರಾಜ್ಯದಲ್ಲಿಯೂ ಜಾರಿಗೆ ತರಬೇಕೆಂದ ಅವರು, ನಮ್ಮ ಸಂಘದ ನ್ಯಾಯಯುತ ಮೂರು ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಿ ನೌಕರರ ಬಾಂಧವರ ಹಿತವನ್ನು ಕಾಪಾಡಬೇಕೆಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ನೌಕರ ಬಾಂಧವರಾದ ಎಂ.ಎಂ.ಬಳಗಾನೂರ, ಮನೋಜ ಪಾಟೀಲ, ಎಂ.ವೈ.ಒಳಸಂಗ, ಎಂ.ವ್ಹಿ.ಗಬ್ಬೂರ, ಶಂಕರ ತಳವಾರ, ಮಂಜುನಾಥ ಹಳ್ಳೂರ, ಅನಿತಾ ಪಾಟೀಲ, ಎಸ್.ಆರ್.ಇಬ್ರಾಹಿಂಪೂರ, ಜಗದೀಶ ಹಾರಿವಾಳ ಇತರರು ಇದ್ದರು.

