ವಿಜಯಪುರ: ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಆಯಾ ಬಿಇಒ, ಸಿಡಿಪಿಒ, ಡಿಸಿಪಿಓ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಬೇಕು. ಇಲ್ಲದಿದ್ದರೆ ಆಯಾ ಶಾಲೆಯ ಮುಖೋಪಾಧ್ಯಾಯರು, ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ೨೦೨೪-೨೫ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ಶಾಲೆಯಲ್ಲಿ ಓರ್ವ ಮಹಿಳಾ ಶಿಕ್ಷಕರನ್ನು ಕೌನ್ಸಲರ್ ಆಗಿ ನೇಮಿಸಿಕೊಂಡು ಮಕ್ಕಳಿಗೆ ಪೋಕ್ಸೋ, ದೌರ್ಜನ್ಯ, ಬಾಲ ಕಾರ್ಮಿಕರ ಕುರಿತಾಗಿ ಜಾಗೃತಿ ಮೂಡಿಸಬೇಕು. ಬೋಧನೆಯಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು. ದೌರ್ಜನ್ಯಕ್ಕೊಳಗಾದ ಮಕ್ಕಳ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಅವರ ಮಾನಸಿಕ ಆರೋಗ್ಯ ಸುಧಾರಣೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ದತ್ತು ಪಡೆದ ಹಾಗೂ ಸಾರ್ವಜನಿಕ ಸ್ಥಳದಲ್ಲಿ ದೊರೆತ ಅನಾಮಧೇಯ ಮಕ್ಕಳ, ಶಿಶುವಿನ ಮಾಹಿತಿಯನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪ್ರಮುಖ ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲತೆ ಮೈಗೂಡಿಸಿಕೊಂಡು ಅತ್ಯಂತ ಮುತುರ್ವಜಿಯಿಂದ ಮಕ್ಕಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಜಿಲ್ಲೆಯ ಬಾಲಕಾರ್ಮಿಕರ ಕುರಿತಾಗಿ ಮಾಹಿತಿ ಹೊಂದಿ, ಬಾಲ್ಯ ವಿವಾಹ ಮಾಹಿತಿ ಸಂಗ್ರಹಿಸಬೇಕು ಎಂದು ಅವರು ಹೇಳಿದರು.
ಬಾಲ ಮಂದಿರದಿಂದ ಬಿಡುಗಡೆಗೊಂಡ ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹದಿಂದ ರಕ್ಷಿಸಿದ ಮಕ್ಕಳ ಮೇಲೆ ನಿಗಾವಹಿಸಬೇಕು. ಅವರ ಬಗ್ಗೆ ನಿರಂತರವಾಗಿ ಮಾಹಿತಿಯನ್ನು ಸಂಗ್ರಹಿಸಬೇಕು. ಸಂತ್ರಸ್ತ ಮಕ್ಕಳಿಗೆ ಸರಕಾರದಿಂದ ಸಿಗಬೇಕಾದ ಸವಲತ್ತು, ಸಹಾಯಧನವನ್ನು ಆದ್ಯತೆಯ ಮೇರೆಗೆ ಒದಗಿಸುವಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ,ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಕಾರಿ ಸಿ.ವಿ ಕುಂಬಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

