ಚಡಚಣ: ಸಮೀಪದ ರೇವತಗಾಂವ ಗ್ರಾಮದಲ್ಲಿ ಶುಕ್ರವಾರದಂದು ವರಮಹಾಲಕ್ಷ್ಮೀ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸಿದರು.
ಶುಕ್ರವಾರದಂದು ಮುಂಜಾನೆ ಮನೆಯನ್ನು ಶುಚಿಗೊಳಿಸಿ, ರಂಗೋಲಿ, ತಳಿರು ತೋರಣಗಳಿಂದ ಅಲಂಕರಿಸಿ, ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ತೊಟ್ಟು ಮಡಿಯಲ್ಲಿ ನೈವೇದ್ಯವನ್ನು ತಯಾರಿಸಿ, ಸಣ್ಣ ಉಕ್ಕಿನ ಬಿಂದಿಗೆ ಅಥವಾ ಬೆಳ್ಳಿಯ ಚೆಂಬನ್ನು ಕಲಶದ ರೂಪದಲ್ಲಿ ಇಟ್ಟು ಅದರಲ್ಲಿ ನೀರನ್ನು ತುಂಬಿಸಿ ಅದಕ್ಕೆ ಸ್ವಲ್ಪ ಖರ್ಜೂರ ಹಾಗೂ ದ್ರಾಕ್ಷಿಯನ್ನು ಹಾಕಿದರು. ಒಂದು ತಟ್ಟೆಯಲ್ಲಿ ಅಕ್ಕಿಯನ್ನು ಹರಡಿ ಅದರಲ್ಲಿ ಕಲಶವನ್ನು ಇಟ್ಟು, ಮಾವಿನ ಎಲೆ ಹಾಗೂ ವೀಳೈದೆಲೆಯನ್ನು ಕಲಶದ ಸುತ್ತ ಜೋಡಿಸಿ ಅದರ ಮೇಲೆ ಅರಿಶಿಣ ಹಚ್ಚಿದ ತೆಂಗಿನಕಾಯಿಯನ್ನು ಇಟ್ಟು ಅದಕ್ಕೆ ಶ್ವೇತವರ್ಣದ ಕೆಂಪು ಅಂಚಿನ ಸೀರೆಯನ್ನು ಉಡಿಸಿ ಅಲಂಕರಿಸಿ. ಜೊತೆ ಒಡವೆಗಳನ್ನು ಹಾಕಿ ಗ್ರಾಮದ ಅಶ್ವೀನಿ ಅಪ್ಪಾಸಾಬ ಅಡಕೆಯವರ ಮನೆಯಲ್ಲಿ ಸಿಂಗಾರಗೊಳಿಸಿದ್ದರು.
ಲಕ್ಷ್ಮೀಯ ಮುಂದೆ ಕಮಲದ ಹೂವು ಹಾಗೂ ಬಿಲ್ವಪತ್ರೆಯನ್ನು ಇಟ್ಟು ಪೂಜೆ ಮಾಡಿದರು. ಅಲ್ಲದೇ ಲಕ್ಷ್ಮೀಯ ಮುಂದೆ ಹಣ, ಚಿನ್ನ, ಬಳೆ, ಹಣ್ಣು, ಸ್ವೀಟ್, ಅರಿಶಿಣ, ಕುಂಕುಮ ಎಲ್ಲವನ್ನೂ ಇಟ್ಟಿದ್ದರು. ಹೀಗಾಗಿ ನಮ್ಮ ಪೂರ್ವಿಕರು ಎಲ್ಲಿ ತನು, ಮನ, ಮನೆ ಶುದ್ಧವಾಗಿರುತ್ತದೋ ಅಲ್ಲಿ ಲಕ್ಷ್ಮೀಯು ನೆಲೆಸುತ್ತಾಳೆ ಎಂಬ ನಂಬಿಕೆಯನ್ನು ಹೊಂದಿದ್ದರು. ನೈವೇದ್ಯಕ್ಕೆ ಕಡಲೆ ಬೇಳೆಯಿಂದ ತಯಾರಿಸಿದ ಪಾಯಸ, ಹೋಳಿಗೆ ಇತ್ಯಾದಿ ಸಿಹಿ, ತಿನಿಸುಗಳನ್ನು ದೇವರಿಗೆ ಅರ್ಪಿಸಿದರು. ಮನೆಗೆ ಮುತ್ತೈದೆಯರನ್ನು ಕರೆದು ಅರಿಶಿಣ, ಕುಂಕುಮ, ಸಿಹಿ ಕೊಟ್ಟರು. ಇದೇ ರೀತಿ ಮದುವೆಯಾದ ಹೆಣ್ಣು ಮಕ್ಕಳು ಮೊದಲನೇ ವರ್ಷದಿಂದ ಒಂಭತ್ತು ವರ್ಷದವರೆಗೆ ಶ್ರದ್ಧೆಯಿಂದ ವ್ರತವನ್ನಾಚರಿಸಿ ಒಂಬತ್ತನೇ ವರ್ಷ ವ್ರತವನ್ನು ಮುಗಿಸುತ್ತಾರೆ.
ಗ್ರಾಪಂ ಸದಸ್ಯೆ ಲಕ್ಷ್ಮೀಬಾಯಿ ಮಾಳಿಯವರು ಮಾತನಾಡುತ್ತ. ಲಕ್ಷ್ಮೀಯು ಕ್ಷೀರ ಸಾಗರದಿಂದ ಅವತಾರ ತಾಳಿದ್ದಾಳೆ ಎನ್ನುವ ಕಥೆಯಿದೆ. ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದಾರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರ ಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಲಕ್ಷ್ಮೀ ಉದ್ಭವಿಸುತ್ತಾಳೆ. ಆದ್ದರಿಂದಲೇ ಇಷ್ಟಾರ್ಥಗಳನ್ನು ಪೂರೈಸುವ
ಲಕ್ಷ್ಮೀಯ ಆರಾಧನೆಗಾಗಿ ಈ ಹಬ್ಬವಾಗಿದೆ. ಪ್ರತಿವರ್ಷವೂ ಲಕ್ಷ್ಮೀಯನ್ನು ಶ್ರದ್ಧೆ-ಭಕ್ತಿಯಿಂದ ಆರಾಧಿಸುವುದರಿಂದ ಸಕಲ ಇಷ್ಟಾರ್ಥವೂ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಕೂಡ ಇದೆ ಎಂದರು.
Subscribe to Updates
Get the latest creative news from FooBar about art, design and business.
Related Posts
Add A Comment

