ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲಾ-ಕಾಲೇಜುಗಳ ನೌಕರರ ಸಂಘ ಮನವಿ
ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ) ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ (ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ) ವಿಧೇಯಕ ೨೦೧೪ ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಭವಿಷ್ಯವರ್ತಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸುವ ಮೂಲಕ ದಿನಾಂಕ: ೦೧-೦೪-೨೦೦೬ರ ಪೂರ್ವದಲ್ಲಿ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ “ಹಳೆಯ ನಿಶ್ಚಿತ ಪಿಂಚಣಿ” ಸೌಲಭ್ಯ ನೀಡುವುದು. ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ (ಓಪಿಎಸ್) ವನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಒಂದು ವೇಳೆ ಸೆ.೫ ರ ಶಿಕ್ಷಕರ ದಿನಾಚರಣೆಯ ಒಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸಿದೆ ಹೋದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲು ಸಂಘಟನೆ ತೀರ್ಮಾನಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮನವಿ ಪತ್ರ ನೀಡಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಮಾಜಿ ಅರುಣ ಶಹಾಪೂರ, ಸಂಘದ ಅದ್ಯಕ್ಷರು ಬಸಯ್ಯ ಹಿರೇಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅದ್ಯಕ್ಷ ಶಿವಾನಂದ ಹಿರೇಕುರಬರ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ವಪ್ಪಾರಿ, ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ, ಅರ್.ಎಸ್.ತುಂಗಳ, ಎಸ್.ಜಿ.ಹಂಚಿನಾಳ, ಸರಕಾರಿ ಎನ್.ಪಿ.ಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷರು ಮಲ್ಲನಗೌಡ ಹಡಲಗೇರಿ,ಆನಂದ ಕುಲಕರ್ಣಿ, ಸಂಜೀವ ಫುಲಾರಿ, ವ್ಹಿ.ಎನ್.ಚವ್ಹಾಣ, ರಮೇಶ ಗಂಗನಳ್ಳಿ, ಎಸ್.ಅರ್.ಮಠ, ಎನ್.ಎಸ್.ಕಾಳೆ, ಎನ್.ಎಸ್.ಕುಂದರಗಿ, ಅಶೋಕ ಕಟ್ಟಿ, ಮೌನೇಶ ಗೌಂಡಿ, ಶಿವಲಿಂಗ ಉಮ್ಮರಗಿ, ಮಂಜು ನಾಯ್ಕೋಡಿ, ಮಲ್ಲಿಕಾರ್ಜುನ ಲೋಣಿ, ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು ನೌಕರರು ಉಪಸ್ಥಿತರಿದ್ದರು.

