ಬೆಂಗಳೂರು: ಖಾಸಗಿ ಶಾಲೆಗಳು, ಹೋಟೆಲ್, ಏರ್ಪೋರ್ಟ್ಗಳ ನಂತರ ಇದೀಗ ಬೆಂಗಳೂರಿನ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಬಸವನಗುಡಿಯ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಹಾಗೂ ಸದಾಶಿವನಗರದ ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಕೂಡಲೇ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.
ಪರಿಶೀಲನೆ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ್ದರು.
“ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ(ದಕ್ಷಿಣ ವಿಭಾಗ) ಲೋಕೇಶ್ ಬಿ ಜಗಲಾಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜುಗಳಿಗೆ ಬಾಂಬ್ ಬೆದರಿಕೆಯ ವಿಷಯ ತಿಳಿದ ಕೂಡಲೇ ಆತಂಕಕ್ಕೊಳಗಾದ ಹೆಚ್ಚಿನ ಪೋಷಕರು ಕಾಲೇಜುಗಳ ಮುಂದೆ ಜಮಾಯಿಸಿದರು. ಪೋಲೀಸ್ ಅಧಿಕಾರಿಗಳೊಂದಿಗೆ ಮಕ್ಕಳ ಸುರಕ್ಷತೆ ಬಗ್ಗೆ ವಿಚಾರಿಸಿದರು.

