ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲೆಯಲ್ಲಿ ಅಕ್ಟೋಬರ್ ೨೬ ರಂದು ಜಿಲ್ಲೆಯ ೯ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಕಡ್ಡಾಯ ಹಾಗೂ ೨೭ ರಂದು ೮೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ ೮-೩೦ರಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಾಜ್ಞೆ ಘೋಷಿಸಿದ್ದು, ಸದರಿ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
