ಕನ್ನಡ ನಾಮಫಲಕ ಅಳವಡಿಕೆಯಲ್ಲಿ ಲೋಪವಾದಲ್ಲಿ ಮುಖ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ, ನೀರಿನ ಕರ, ವಾಣಿಜ್ಯ ಮಳಿಗೆಗಳ ಬಾಡಿಗೆ, ಜಾಹೀರಾತು, ಟ್ರೇಡ್ ಲೈಸನ್ಸ್ ವಸೂಲಾತಿಗಳಲ್ಲಿ ಪ್ರಗತಿ ಸಾಧಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತೆರಿಗೆ ವಸೂಲಾತಿಯಲ್ಲಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಎಸ್‌ಎಫ್‌ಸಿ, ೧೪ನೇ, ೧೫ನೇ ಹಣಕಾಸ, ಕುಡಿಯುವ ನೀರು, ವಸತಿ, ಎಸ್‌ಬಿಎಂ ೧.೦, ೨.೦ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟುಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಕನ್ನಡ ನಾಮಫಲಕ ಅಳವಡಿಕೆಯಲ್ಲಿ ಲೋಪವಾದಲ್ಲಿ ಮುಖ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ ಸೇರಿದಂತೆ ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

