ಪಾರದರ್ಶಕವಾಗಿ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆಗಳ ನೇಮಕಾತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಖಾಲಿ ಇರುವ ೩೧೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೮೫೭ ಅಂಗನವಾಡಿ ಸಹಾಯಕಿಯರನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಯಾವುದೇ ಮಧ್ಯವರ್ತಿಗಳು, ಅಧಿಕಾರಿ-ಸಿಬ್ಬಂದಿಗಳು ಅನ್ಯ ಮಾರ್ಗದಿಂದ ಆಯ್ಕೆಯಾಗಿ ಹಣದ ಬೇಡಿಕೆ ಇಟ್ಟಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಯ ಮುನ್ನ ಪ್ರಥಮ ಹಂತದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿ ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಇಲಾಖಾ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಬಯಸುವ ಅಭ್ಯರ್ಥಿಗಳು ಯಾವುದೇ ಹಣಕಾಸಿನ ವ್ಯವಹಾರ ಮಾಡಿ ಮೋಸ ಹೋಗದಂತೆ ಅವರು ಎಚ್ಚರಿಕೆ ನೀಡಿದ್ದಾರೆ.

