ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯ ಸುಧಾರಣಾ ವಿಷಯಾಧಾರಿತ ಕಾರ್ಯಗಾರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅತಿವೃಷ್ಟಿ-ಅನಾವೃಷ್ಟಿ, ಬೆಂಕಿ ಅವಘಡಗಳಂತಹ ಪ್ರಾಕೃತಿಕ ವಿಕೋಪ ಸಂಭವಿಸುವ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ತರಬೇತಿ ಹೊಂದುವುದು ಅಗತ್ಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.
ಅವರು ನಗರದ ಟಕ್ಕೆ ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯ ಸಭಾ ಭವನದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯ ಸುಧಾರಣಾ ವಿಷಯಾಧಾರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅನಿರೀಕ್ಷಿತವಾಗಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಗಳನ್ನು ನಿರ್ವಹಿಸಲು, ತುರ್ತು ಪರಿಹಾರೋಪಾಯಗಳನ್ನು ಹೇಗೆ ಕಾರ್ಯರೂಪಕ್ಕೆ ತರಬಹುದು ಎಂಬುದರ ಬಗ್ಗೆ ಮುಂಚಿತವಾಗಿಯೇ ರೂಪುರೇಷೆ ಸಿದ್ಧಪಡಿಸಿಕೊಂಡಿರಬೇಕು. ವಿದ್ಯುತ್ ಅವಘಡ, ಪ್ರವಾಹದಂತಹ ಯಾವುದೇ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ರಕ್ಷಣೆಗೆ ಮುಂದಾಗುತ್ತಾರೆ. ಈ ಸಂದರ್ಭದಲ್ಲಿ ಹಲವು ಇಲಾಖೆಗಳು ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಪರಿಹಾರಾತ್ಮಕ ಕಾರ್ಯಾಚರಣೆಗೆ ಆದ್ಯತೆ ನೀಡಬೇಕು ಎಂದರು.
ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ಅಧಿಕಾರಿಗ ಡಾ. ಚಂದ್ರನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಕೋಪಗಳನ್ನು ತಡೆಗಟ್ಟಲಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಕುರಿತ ತರಬೇತಿ ನೀಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರಥಮ ಹಂತದಲ್ಲಿ ಜಿಲ್ಲಾ ಕೇಂದ್ರದಲ್ಲಿ ನಂತರ ಮೈಸೂರಿನಲ್ಲಿ ಎರಡನೇ ಹಂತದ ತರಬೇತಿಯನ್ನು ನೀಡಲಾಗುತ್ತದೆ. ಮೂರನೇಯ ಹಂತದಲ್ಲಿ ಆಯ್ದ ಅಧಿಕಾರಿಗಳ ತಂಡವನ್ನು ಬೇರೆ ರಾಜ್ಯಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಇನ್ನಷ್ಟು ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಜಿ.ಎಸ್. ಹಿರೇಮಠ, ಜಿಲ್ಲಾ ಅಗ್ನಿಶಾಮಕಾಧಿಕಾರಿ ರಂಗನಾಥ, ಜಿಲ್ಲಾ ವಿಕೋಪ ನಿರ್ವಹಣಾ ಕೋಶದ ರಾಕೇಶ ಜೈನಾಪೂರ, ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕದಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅರಣ್ಯ ಮತ್ತು ಪರಿಸರ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

