ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ಕಾಮಗಾರಿಗಳನ್ನು ವ್ಯಸ್ಥಿತವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಾಸನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಬನೂರ ಗ್ರಾಮಕ್ಕೆ ಜಿ.ಪಂ ಭೇಟಿ ನೀಡಿದ ಅವರು, ಗ್ರಾಮದ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕುಡಿಯುವ ನೀರು, ರಸ್ತೆ, ಸ್ವಚ್ಚತೆ ಹಾಗೂ ಚರಂಡಿ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮದ ಕೊಳಚೆ ನೀರು ಹರಿದು ಹೋಗುವತ್ತ ಚರಂಡಿ ವ್ಯವಸ್ಥೆ ಮತ್ತು ಸಿ.ಸಿ ರಸ್ತೆಗಳನ್ನು ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆಗಳಡಿ ಕ್ರಿಯಾ ಯೊಜನೆ ಅನುಮೋದನೆ ಪಡೆದು, ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಂತ್ರಿಕ ಸಿಬ್ಬಂದಿಗೆ ಸೂಚಿಸಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿ, ಶಾಲೆಯಲ್ಲಿ ಜಲ ಜೀವನ ಮಿನ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರರಾದ ಅಂಬರೀಶ ಮೇಲಿನಮನಿ ಅವರಿಗೆ ಸೂಚಿಸಿದರು.
ನಂತರ ಸಾಸನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ, ಸಿಬ್ಬಂದಿಗಳ ಹಾಜರಾತಿ, ಆರೋಗ್ಯ ಕೇಂದ್ರದ ಸ್ವಚ್ಛತೆ, ಕುಡಿಯುವ ನೀರು ಹಾಗೂ ಹೊರ ರೋಗಿಗಳ ಆಸನ ವ್ಯವಸ್ಥೆ ಮತ್ತು ಔಷಧಿಗಳ ಸಂಗ್ರಹ ಬಗ್ಗೆ ವೈದ್ಯಾಧಿಕಾರಿಗಳಾದ ಮಹಾಂತೇಶ ಸೋಮನಾಳ ಅವರಿಂದ ಮಾಹಿತಿ ಪಡೆದರು. ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಲ್ಲಿನ ಅಡುಗೆ ಕೊಠಡಿ, ಗ್ರಂಥಾಲಯ ಹಾಗೂ ವಿದ್ಯಾರ್ಥಿಗಳ ಹಾಜರಾತಿ, ಕೊಠಡಿಗಳ ಲಭ್ಯತೆ ಕುರಿತು ಪರಿಶೀಲಿಸಿದರು. ವಿದ್ಯಾರ್ಥಿಗಳ ಯಾವುದೇ ಸಮಸ್ಯೆಯಾಗದಂತೆ ಅವರ ಓದಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸಮರ್ಪಕ ಕೊಠಡಿಗೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಿಂಗಪ್ಪ ಮಸಳಿ, ಸಹಾಯಕ ನಿರ್ದೇಶಕರಾದ ಸುಜಾತ ಯಡ್ರಾಮಿ, ಬಸವನ ಬಾಗೇವಾಡಿ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ತಾಳಿಕೋಟಿ ತಾಲೂಕಾ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಆರ್.ಎಸ್. ಹಿರೇಗೌಡರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ದೇವೂರ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರರಾದ ವಿಜಯಕುಮಾರ, ಗ್ರಾ.ಪಂ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

