ಸಿಂದಗಿ & ದೇವರಹಿಪ್ಪರಗಿ ತಾಲೂಕಿನ ಶಾಲೆ-ಹಾಸ್ಟೆಲ್ ಗಳಿಗೆ ಭೇಟಿ | ಮಕ್ಕಳೊಂದಿಗೆ ಸಂವಾದ | ಆತ್ಮವಿಶ್ವಾಸ ಮೂಡಿಸುವಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಾಲೆ, ಅಂಗನವಾಡಿಗಳು ಹಾಗೂ ವಸತಿ ನಿಲಯಗಳ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ, ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ನೀಡಿ, ಒಂದು ವೇಳೆ ಗುತ್ತಿಗೆದಾರರು ಕಳಪೆ ಮಟ್ಟದ ಆಹಾರ ಪೂರೈಸಿದರೆ ನಮ್ಮ ಕಾರ್ಯಾಲಯಕ್ಕೆ ಮಾಹಿತಿ ನೀಡಿ, ಅಂತಹ ಆಹಾರ ಪೂರೈಸಿದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಸಿಂದಗಿ ಹಾಗೂ ದೇವರಹಿಪ್ಪರಗಿ ತಾಲೂಕು ವ್ಯಾಪ್ತಿಯ ವಸತಿ ನಿಲಯ ಅಂಗನವಾಡಿ, ಹಾಗೂ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ತಿಳಗೋಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ದೇವರ ಹಿಪ್ಪರಿಗಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ನಂತರ ಎಸ್ ಎಸ್ ಎಲ್ ಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಭಯ ಮುಕ್ತವಾಗಿ ಪರೀಕ್ಷೆ ಎದುರಿಸುವುದು ಹೇಗೆ ಎನ್ನುವ ಕುರಿತು ಮಾತನಾಡಿದ ಅವರು, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶದಲ್ಲಿ ಸುಧಾರಣೆ ಕಂಡುಕೊಳ್ಳುವಂತೆ ಸೂಚನೆ ನೀಡಿದರು.
ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲೂಕ ಪಂಚಾಯಿತಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


