ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗಾಗಿ ಪಟ್ಟಣ ಹಾಗೂ ತಾಲ್ಲೂಕಿನ ಎಲ್ಲ ಕನ್ನಡಾಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರು ಹಾಗೂ ಪರಿಷತ್ ಕೈಗೊಳ್ಳುವ ಎಲ್ಲ ಕ್ರಮಗಳಿಗೆ ತಾಲ್ಲೂಕು ಆಡಳಿತದ ಸಹಕಾರವಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚಿಗೆ ಜರುಗಿದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ೨ನೇ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸಾಹಿತ್ಯ ಸಮ್ಮೇಳನದ ರೂಪುರೇಷೆಗಳನ್ನು ಪರಿಷತ್ತಿನ ವಿವಿಧ ಸಮಿತಿಗಳು ಸಿದ್ಧಪಡಿಸಲಿ ನಾವು ಅಗತ್ಯ ನೆರವು ನೀಡಲು ಸಿದ್ಧ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಸಮ್ಮೇಳನದ ಪೂರ್ವತಯಾರಿಗಾಗಿ ಇನ್ನೂ ಹಲವು ಸಭೆಗಳು ಜರುಗುತ್ತವೆ. ಸಾಹಿತ್ಯ ಸಮ್ಮೇಳನ ಯಾವುದೇ ಜಾತಿ, ಮತ, ವರ್ಗ, ಸಮುದಾಯಕ್ಕೆ ಸೀಮಿತವಾಗಿಲ್ಲ. ಇದು ಎಲ್ಲ ಕನ್ನಡ ಮನಸ್ಸುಗಳ ಜಾತ್ರೆ. ಆದ್ದರಿಂದ ಮುಂದಿನ ಎಲ್ಲ ಸಭೆಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಿ ತಮ್ಮ ವಿಚಾರ, ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಬೇಕು ಎಂದರು.
ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ, ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಕಾಶೀನಾಥ ತಳಕೇರಿ, ಪ್ರಕಾಶ ಗುಡಿಮನಿ ಸಮ್ಮೇಳನದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ಧು ಮೇಲಿನಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎ.ಎಸ್.ಡೋಣೂರ, ಸಿಂದಗಿ ತಾಲ್ಲೂಕು ಕಸಾಪ ಮಾಜಿಅಧ್ಯಕ್ಷ ಚಂದ್ರಶೇಖರ ದೇವರಡ್ಡಿ, ವಚನ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಸಂಗಪ್ಪ ತಡವಲ್, ಅಜೀಜ್ ಯಲಗಾರ, ರಾವುತ ತಳಕೇರಿ, ಉಮೇಶ ಪಟ್ಟಣ, ಅರುಣ ಕೋರವಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಳು ಇದ್ದರು.

