ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜೀವನದಲ್ಲಿ ಪ್ರತಿಯೊಬ್ಬರು ಗುರಿಯನ್ನಿಟ್ಟುಕೊಳ್ಳಬೇಕು. ಗುರಿ ಹೊಂದಿದಾಗ ಮಾತ್ರ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜೀವನದಲ್ಲಿನ ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಕರೆ ನೀಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯಂತ ಶಿಸ್ತು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದೆ. ಒಬ್ಬ ಮಹಿಳೆಯಾಗಿ, ತಾಯಿಯಾಗಿ, ರೈತನ ಮಗಳಾಗಿ ನಾನು ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿ, ಸರ್ಕಾರದಲ್ಲಿ ಸಚಿವೆಯಾಗಿದ್ದೇನೆ ಎಂದು ಹೇಳಿದರು.
ಒಂದು ಕಾಲದಲ್ಲಿ ಮಹಿಳೆ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ ಎಂಬುದಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಮಹಿಳೆ ಇಂದಿನ ದಿನಗಳಲ್ಲಿ ಅಬಲೆಯಲ್ಲ-ಸಬಲೆ ಎಂಬುದು ಸಾಬೀತಾಗಿದೆ. ಮಹಿಳೆಯರು ಸಾಧನೆ ಮಾಡದ ಯಾವುದೇ ಕ್ಷೇತ್ರ ಇಂದು ಉಳಿದಿಲ್ಲ. ಶೈಕ್ಷಣಿಕ, ಕ್ರೀಡಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಲ್ಲಿ-ರಂಗಗಳಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ವಿವಿಧ ಮಹನೀಯರ ಸಾಧನೆಗಳಿಂದ ಪ್ರೇರಣೆ ಪಡೆದು ನೀವು ಸಹ ಉತ್ತಮ ಗುರಿಯನ್ನಿಟ್ಟುಕೊಂಡು ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯದ 30 ಮಹಾವಿದ್ಯಾಲಯಗಳಿಂದ 600 ವಿದ್ಯಾರ್ಥಿನಿಯರು ತಮ್ಮ ಸೃಜನಾತ್ಮಕ ಕಲೆಗಳನ್ನು ಈ ವೇದಿಕೆ ಮೂಲಕ ಪ್ರಸ್ತುತ ಪಡಿಸಲಿದ್ದಾರೆ. ಹಿಂದೂಸ್ತಾನಿ ಕರ್ನಾಟಕ ಶಾಸ್ತ್ರೀಯ ಸಂಗೀತ, ವಿವಿಧ ವಾದ್ಯಗಳ ಸ್ಪರ್ಧೆ, ತಾಳ ವಾದ್ಯ, ಲಘು ಗಾಯನ, ಪಾಶ್ಚಾತ ಸಂಗೀತ, ಸಮೂಹ ಗಾಯನ, ಜಾನಪದ, ಪಾಶ್ಚಿಮಾತ್ಯ ವಾದ್ಯ ಸಂಗೀತ, ನೃತ್ಯ, ಸಾಹಿತ್ಯ ಚಟುವಟಿಕೆ, ರಂಗಭೂಮಿ, ಕಲೆ, ಚಿತ್ರಕಲೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.
ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವರಾದ ಎಚ್.ಎಂ.ಚಂದ್ರಶೇಖರ, ವಿದ್ಯಾರ್ಥಿನಿ ಕ್ಷೇಮ ಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

“ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ತಮ್ಮ ಸೃಜನಶೀಲತೆ ಕಲೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.”
– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

“ಶಿಕ್ಷಣದ ಮೂಲಕ ಸಬಲೀಕರಣ, ಆ ಮೂಲಕ ಸ್ವಾವಲಂಬಿ, ಸ್ವಾಭಿಮಾನದ ಜೀವನ ಕಟ್ಟಿಕೊಂಡು ಈ ಸಮಾಜಕ್ಕೆ ಆದರ್ಶ ಮಹಿಳೆಯನ್ನು ನೀಡುವುದು ವಿಶ್ವವಿದ್ಯಾಲಯದ ಮುಖ್ಯ ಧ್ಯೇಯವಾಗಿದೆ. ಇದಕ್ಕೆ ಪೂರಕವಾಗಿ ವಿಶ್ವವಿದ್ಯಾಲಯವು ಹಲವಾರು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸುತ್ತಿದೆ. ಸಮಾಜ ಕಾರ್ಯ, ಎನ್‍ಸಿಸಿ, ಎನ್‍ಎಸ್‍ಎಸ್ ಸೇರಿದಂತೆ ವಿವಿಧ ನಿಕಾಯಗಳ ಮೂಲಕ ಸಮಗ್ರ, ಸಂತುಲಿತ ವ್ಯಕ್ತಿತ್ವ ವಿಕಸನಕ್ಕೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದರ ಭಾಗವಾಗಿ ಶಕ್ತಿ ಸಂಭ್ರಮ ಎಂಬ ವಿದ್ಯಾರ್ಥಿನಿಯರ ಸುಪ್ತವಾಗಿ ಹುದುಗಿರುವ ಕಲೆಗಳನ್ನು ಅನಾವರಣಗೊಳಿಸುವ ವೇದಿಕೆಯನ್ನು ಕಲ್ಪಿಸಿದೆ.”
– ಪ್ರೊ.ಬಿ.ಕೆ.ತುಳಸಿಮಾಲ
ಕುಲಪತಿಗಳು, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ

