ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಇಂತಹ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಮುಂದಾಗುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ವಹಿಸಬೇಕು. ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ಅವರು ಹೇಳಿದರು.
ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನ ನಿಗದಿತ ಅವಧಿಯಲ್ಲಿ ಸಾಧಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಯಾವುದೇ ಅರ್ಹ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ವಿಳಂಬ ಮಾಡದೇ ಅರ್ಜಿ ಇತ್ಯರ್ಥ ಪಡಿಸಿ ಶಿಷ್ಯವೇತನ ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ನಿರಂತರ ಫಾಲೋಅಪ್ ಮಾಡಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಇ-ಆಫೀಸ್ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಪ್ರಧಾನಮಂತ್ರಿ ಸೂರ್ಯ ಘರ ಯೋಜನೆಯಡಿಯಲ್ಲಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲ್ಛಾವಣಿಯಲ್ಲಿ ಸೋಲಾರ ಅಳವಡಿಕೆಗೆ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಧಾನಮಂತ್ರಿ ಸೂರ್ಯ ಘರ ಯೋಜನೆ, ಮಾದರಿ ಸೌರ ಗ್ರಾಮ, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (ಕುಸುಮಬಿ) ಯೋಜನೆ ಕುರಿತು ಹೆಸ್ಕಾಂ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಪಿಪಿಟಿ ಮೂಲಕ ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಡಿವ ನೀರಿನ ಅಭಾವವಾಗದಂತೆ ಮುಂಜಾಗ್ರತೆ ವಹಿಸಿ
ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಈಗಿನಿಂದಲೇ ಮುಂಜಾಗ್ರತೆ ವಹಿಸಿಕೊಂಡು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಸೂಚಿಸಲಾಗಿದ್ದರ ಮೇರೆಗೆ ಮತ್ತೊಮ್ಮೆ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಸಂಪರ್ಕ ಒದಗಿಸದೇ ಇರುವ ಸ್ಥಳಗಳನ್ನು ಖಚಿತಪಡಿಸಿಕೊಂಡು ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುವಂತೆ ಉಜ್ವಲ್‍ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಂಡು ಖಚಿತಪಡಿಸಿಕೊಳ್ಳಲು ಈಗಾಗಲೇ ಜಂಟಿ ಸರ್ವೇ ನಡೆಸಲು ಸೂಚಿಸಲಾಗಿತ್ತು. ಆ ವರಧಿ ಆಧರಿಸಿ ಕ್ರಮ ವಹಿಸುವಂತೆ ಅವರು ಸೂಚನೆ ನಿಡಿದರು.