ವಿಜಯಪುರ: ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ನಾವು ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುವುದು ನಿಶ್ಚಿತ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ.
ನಗರದಲ್ಲಿ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ ಮತ್ತು ಭಗೀರಥ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಅವರು ಮಾತನಾಡಿದರು.
ಮತಕ್ಷೇತ್ರದ ಜನರಿಗಾಗಿ ಹಗಲು ರಾತ್ರಿ ದುಡಿದಿದ್ದೇನೆ. ಐದು ವರ್ಷ ಸಚಿವನಾಗಿದ್ದಾಗ ವೈಯಕ್ತಿಕ ಜೀವನ ಬದಿಗೊತ್ತಿ, ವಿಶ್ರಮಿಸದೇ ನೀರಾವರಿ ಕೆಲಸ ಮಾಡಿದ್ದೇನೆ. ಮುಂದೆಯೂ ಜನರ ಅಭಿವೃದ್ಧಿಗೆ ದುಡಿಯಲು ಪಣತೊಟ್ಟಿದ್ದೇನೆ ಎಂದು ಅವರ ಹೇಳಿದರು.
ಜಗತ್ತು ನಂಬಿಕೆ ಮತ್ತು ವಿಶ್ವಾಸದ ಮೇಲೆ ನಿಂತಿದೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರ ಸಂಪೂರ್ಣ ಬೆಂಬಲದಿಂದ 50 ಸಾವಿರ ಹೆಚ್ಚು ಮತಗಳ ಅಂತರದಿಂದ ಗೆಲುವು ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದರು.
ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನೆ ಮನೆಗೆ ತೆರಳಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗಳ ಕುರಿತು ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.