ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ | ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲು | ಅಮಿತ್ ಶಾ ಹೇಳಿಕೆಗೆ ಖಂಡನೆ
ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅವಹೇನಕಾರಿ ಹೇಳಿಕೆ ಖಂಡಿಸಿ ಗುರುವಾರ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಶೂನ್ಯ ವೇಳೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.
ಇದೇ ವೇಳೆ, ಬಿಜೆಪಿ ಸದಸ್ಯರು ಕೂಡ ಅಂಬೇಡ್ಕರ್ ಭಾವಚಿತ್ರ ಹಿಡಿದು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.
ಬಳಿಕ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ಕೌಂಟರ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಅಶ್ಲೀಲ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು.
ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಗದ್ದಲ ತೀವ್ರವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಕೆಲಕಾಲ ಮುಂದೂಡಿದರು.
ಬಳಿಕ ಆಡಳಿತ ಪಕ್ಷದ ಸದಸ್ಯರು ಸಭಾಪತಿ ಕೊಠಡಿಗೆ ತೆರಳಿ, ಸಿಟಿ ರವಿ ವಿರುದ್ಧ ದೂರು ನೀಡಿದ್ದು, ಅವರನ್ನು ಸದಸ್ಯ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಒತ್ತಾಯಿಸಿದ್ದಾರೆ.
ದೂರು ಸ್ವೀಕರಿಸಿದ ಸಭಾಪತಿ ಹೊರಟ್ಟಿ ಅವರು, ಆಡಿಯೋ, ವಿಡಿಯೋ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.
ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ
ಬೆಳಗಾವಿ: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಸುವರ್ಣಸೌಧದ ಮೊಗಸಾಲೆಯಲ್ಲಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ.
ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಮಾತ್ರವಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ ನಡೆದಿದೆ. ಕೂಡಲೇ ಮಾರ್ಷಲ್ಗಳು, ಕಾರಿಡಾರ್ ಗೇಟ್ ಬಂದ್ ಮಾಡಿದರು. ಹೀಗಾಗಿ ಸಿಟಿ ರವಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ?
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ
ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ