ರಾಷ್ಟ್ರೀಯ ಗ್ರಾಹಕರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿದ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಗ್ರಾಹಕರಿಗೆ ತಮ್ಮ ಹಕ್ಕುಗಳ ಮತ್ತು ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯಗಳು ಹಾಗೂ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಗ್ರಾಹಕರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈ ಭೂಮಿಯ ಮೇಲೆ ಪ್ರತಿಯೊಂದು ಜೀವಿಗೂ ಜೀವಿಸುವ ಹಕ್ಕಿದೆ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮಾನವ ಹಕ್ಕುಗಳನ್ನು ಘೋಷಿಸಲಾಯಿತು. ಅಹಾರ, ಉಡುಪು ಮತ್ತು ವಸತಿ ಈ ಸೌಲಭ್ಯಗಳನ್ನು ಪಡೆಯುವದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ ಹಿಂದೆ ವ್ಯಾಪಾರಿಗಳಿಂದ ಭಾರತೀಯರಿಗೆ ಆಗುತ್ತಿರುವ ಶೋಷಣೆ ಮತ್ತು ದುಷ್ಪರಿಣಾಮವನ್ನು ತಪ್ಪಿಸಲು ೧೯೮೬ ರಲ್ಲಿ ಗ್ರಾಹಕರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಗ್ರಾಹಕರು ತಮಗೆ ಮೋಸವಾದಲ್ಲಿ ಈ ಕಾಯ್ದೆಯ ಮೂಲಕ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಬಹುದು. ಮತ್ತು ೨ನೇ ಮಹಾಯುದ್ಧದಲ್ಲಿ ನಡೆದ ಗಣನೀಯ ಸಾವು ನೋವುಗಳು ಮುಂದೆ ಸಂಭವಿಸದಂತೆ ತಡೆಯಲು ಮಾನವ ಹಕ್ಕುಗಳನ್ನು ಘೋಷಿಸಲಾಯಿತು. ಇದರ ಮುಖ್ಯ ಉದ್ದೇಶ ಮಾನವ ಹಕ್ಕುಗಳ ರಕ್ಷಣೆಯಾಗಿದೆ ಎಂದರು.
ಹಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ ಮಾತನಾಡಿದರು. ಗ್ರಾಹಕರ ಹಕ್ಕುಗಳು ಹಾಗೂ ಹಿತರಕ್ಷಣಾ ಕಾಯ್ದೆ ಕುರಿತು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ಮತ್ತು ಮಾನವ ಹಕ್ಕುಗಳು ಮತ್ತು ಕಾಯ್ದೆಯ ಕುರಿತು ನ್ಯಾಯವಾದಿ ಆರ್.ವಾಯ್.ನಾಲತವಾಡ ವಿಶೇಶ ಉಪನ್ಯಾಸ ನೀಡಿದರು. ತಹಶೀಲ್ದಾರ ಬಲರಾಮ ಕಟ್ಟಿಮನಿ, ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ನ್ಯಾಯವಾದಿಗಳ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ ಮಹಾಂತೇಶ ಹಚರಡ್ಡಿ, ನ್ಯಾಯವಾದಿ ಚೇತನ ಶಿವಶಿಂಪಿ ಸೇರಿದಂತೆ ಮತ್ತೀತರರು ಇದ್ದರು.