ರಾಜ್ಯದಲ್ಲಿ ಸರಣಿ ಆತ್ಮಹತ್ಯೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಚಿಸಿ ಆದೇಶ
ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರಮುಖ ನಾಯಕರನ್ನೊಳಗೊಂಡ ಆಂದೋಲನ ಸಮಿತಿ ರಚಿಸಲಾಗಿದೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅರಗ ಜ್ಞಾನೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಶಾಸಕ ಬಸವರಾಜ ಮತ್ತಿಮೂಡ್ ಮತ್ತಿತರರು ಈ ಸಮಿತಿಯಲ್ಲಿದ್ದಾರೆ.
ಬೀದರ್ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಬೆನ್ನಲ್ಲೇ ಆಂದೋಲನ ಸಮಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಚಿಸಿ ಆದೇಶ ಹೊರಡಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ.ಎಸ್. ನವೀನ್, ಭಾರತಿ ಶೆಟ್ಟಿ, ಹೇಮಲತಾ ನಾಯಕ್, ಮಾಜಿ ಸಚಿವ ರಾಜುಗೌಡ, ಮಾಜಿ ಶಾಸಕ ರಾಜ ಕುಮಾರ್ ಪಾಟೀಲ್ ತೇಲ್ಕೂರ್, ರಾಜ್ಯ ಕಾರ್ಯದರ್ಶಿ ಲಲಿತಾ ಅನಪೂರ್, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ವಕ್ತಾರರಾದ ಭಾಸ್ಕರ್ ರಾವ್, ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ ಕುಮಾರ್, ಮಾಧ್ಯಮ ವಿಭಾಗ ರಾಜ್ಯ ಸಂಚಾಲಕ ಕರುಣಾಕರ್ ಖಾಸಲೆ ಈ ಸಮಿತಿಯಲ್ಲಿದ್ದಾರೆ.

ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ ನೋಟ್ ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

