ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಮಾರುತಿ ನಗರದ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಚರಂಡಿ ತುಂಬಿ ಇಲ್ಲಿನ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ ವಹಿಸಿದ್ದಾರೆ
ಎಂದು ಇಲ್ಲಿನ ನಿವಾಸಿ ಸಂಗನಗೌಡ ಪಾಟೀಲ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಇಲ್ಲಿ ನೀರಿನ ಪೈಪೊಂದು ಒಡೆದು ಹೋಗಿ ಸುಮಾರು ದಿನಗಳಾಗಿವೆ. ಇಲ್ಲಿಂದ ಬರುವ ನೀರು ಶೇಖರಣೆಯಾಗಿ ಗಬ್ಬು ವಾಸನೆ ಬೀರುತ್ತಿದೆ. ಈ ಬಗ್ಗೆ ಯಾರೊಬ್ಬರೂ ಗಮನಹರಿಸಿಲ್ಲ. ಕೂಡಲೇ ಈ ಬಗ್ಗೆ ಸೂಕ್ತ ಶಾಶ್ವತ ಪರಿಹಾರ ಕಲ್ಪಿಸಬೇಕು. ತಪ್ಪಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
ಮತ್ತೋರ್ವ ನಿವಾಸಿ ಯಮನವ್ವ ಮಂಡಿ ಮಾತನಾಡಿ ಈ ಸಮಸ್ಯೆಯಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಬದುಕುತ್ತಿದ್ದೇವೆ. ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ತಿಳಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಪುರಸಭೆ ಅಧಿಕಾರಿಗಳು ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸಿ ಪುಣ್ಯ ಕಟ್ಟಿಕೊಳ್ಳಬೇಕು ಎಂದರು.

