ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ನಿಧನದಿಂದ ಮೊಟಕುಗೊಂಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಗಾಂಧಿ ಭಾರತಕ್ಕೆ ಮರು ಚಾಲನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಜ.೨೧ರಂದು ಅದ್ದೂರಿಯಾಗಿ ಈ ಸಮಾವೇಶ ನಡೆಸಲು ತೀರ್ಮಾನಿಸಿದ್ದು ಸಮರೋಪಾದಿಯಲ್ಲಿ ಸಿದ್ದತೆ ನಡೆಸುತ್ತಿದೆ ಎಂದು ಕಲಬುರಗಿ ಗ್ರಾಮೀಣ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ಸಿಂದಗಿ ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ಜ.೨೧ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಸಮಾವೇಶದಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಭಾಗವಹಿಸಬೇಕು. ಬೆಳಗಾವಿಯಲ್ಲಿ ೧೯೨೪ರ ಡಿ.೨೬,೨೭ರಂದು ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ೩೯ನೇ ಅಖಿಲ ಭಾರತ ಅಧಿವೇಶನ ನಡೆದಿತ್ತು. ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನವೂ ಅದಾಗಿತ್ತು. ಅದಕ್ಕೀಗ ೧೦೦ ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಖಿಲ ಭಾರತ ಮಟ್ಟದಲ್ಲಿ ಗಾಂಧಿ ಭಾರತ ಸಮಾವೇಶ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಘೋಷವ್ಯಾಖ್ಯದೊಂದಿಗೆ ಗಾಂಧಿ ಭಾರತ ಸಮಾವೇಶವನ್ನು ಇಡೀ ದೇಶಕ್ಕೆ ಸಂದೇಶ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿ ಈ ಸಮಾವೇಶದ ಮೂಲಕ ಗಾಂಧೀಜಿ ಅವರು ಈ ದೇಶಕ್ಕೆ ನೀಡಿದ ಕೊಡುಗೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶವನ್ನು ಮುನ್ನಡೆಗೆ ತಂದ ವಿಚಾರವಾಗಿ ಈ ಸಮಾವೇಶವನ್ನು ಬೆಳಗಾವಿಯಲ್ಲಿ ನಮ್ಮ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಸಮಾವೇಶದಲ್ಲಿ ಸಿಂದಗಿ ತಾಲೂಕಿನಿಂದ ೨ಸಾವಿರಕ್ಕೂ ಅಧಿಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು. ಪ್ರತಿಯೊಂದು ಬೂತ್‌ಗೆ ಅಗತ್ಯ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಮಲ್ಲಣ್ಣ ಸಾಲಿ, ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾದಿಕ್ ಸುಂಬಡ, ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶ್ರೀಶೈಲ ಕವಲಗಿ, ಅಶೋಕ ಕೋಳಾರಿ, ಎಂ.ಎ.ಖತೀಬ, ಪುರಸಭೆ ಸದಸ್ಯ ಸಂದೀಪ ಚೌರ, ಪ್ರವೀಣ ಕಂಟಿಗೊಂಡ, ಸುರೇಶ ಮಳಲಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ ಸೇರಿದಂತೆ ಬ್ಲಾಕ್ ಮಟ್ಟದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

