ವಿಜಯಪುರ: ಸ್ವಾತಂತ್ರ್ಯ ನಂತರದ ದಿನಗಳಿಂದಲೂ ಕಾಂಗ್ರೆಸ್ ಪಕ್ಷ ದಲಿತರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ದಲಿತರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಮಾಡಿದೆ. ಆ ಮೂಲಕ ದಲಿತರನ್ನು ಸಬಲೀಕರಣವನ್ನು ಮಾಡಿದೆ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ರಮೇಶ ಗುಬ್ಬೇವಾಡ ಹೇಳಿದರು.
ಮಂಗಳವಾರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ನಡೆದ ಪತ್ರಿಕಾಘೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾಲ ಕಾಲಕ್ಕೆ ದಲಿತರು ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದೇ ರೀತಿಯಲ್ಲಿ ಕಾಂಗ್ರೆಸ್ ಪಕ್ಷ ಕೂಡ ದಲಿತರು ಸೇರಿದಂತೆ ಎಲ್ಲ ಜಾತಿ ಜನಾಂಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ಎಂದಿನಂತೆ ಈ ಚುನಾವಣೆಯಲ್ಲಿ ಕೂಡ ದಲಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಜಿಲ್ಲೆಯ ಎಂಟೂ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದ ಬಿಜೆಪಿ ಸರ್ಕಾರ ದಲಿತರಿಗೆ ಒಳಮೀಸಲಾತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸು ಈ ಚುನಾವಣೆಯಲ್ಲಿ ಪರಿಣಾಮ ಬೀರುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸುಭಾಷ್ ಕಾಲೇಬಾಗ, ಒಳಮೀಸಲಾತಿ ಶಿಫಾರಸು ಚುನಾವಣೆ ಸಮಯದಲ್ಲಿ ದಲಿತರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ. ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಸದಾಶಿವ ಆಯೋಗದ ವರದಿಯನ್ನು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಹುನ್ನಾರವಿದು. ಇದು ಕೇವಲ ಶಿಫಾರಸು ಮಾತ್ರ. ಇದು ಸಂಸತ್ತಿನ ಉಭಯ ಸದನಗಳಲ್ಲಿ ಮಂಡನೆಯಾಗಿ ಸಂವಿಧಾನದ ತಿದ್ದುಪಡಿ ನಂತರ ರಾಷ್ಟ್ರಪತಿಯ ಅಂಕಿತ ಬಿದ್ದಾಗ ಮಾತ್ರ ಇದು ಜಾರಿಯಾಗುತ್ತದೆ. ಆದರೆ ಬಿಜೆಪಿ ಸರ್ಕಾರ ಈಗಾಗಲೇ ಇದನ್ನು ಜಾರಿಗಿಳಿಸಿದ್ದೇವೆ ಎಂದು ಸುಳ್ಳು ಹೇಳುತ್ತಾ ದಲಿತರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ಆದರೆ ದಲಿತರು ಪ್ರಜ್ಞಾವಂತರಾಗಿದ್ದು ಬಿಜೆಪಿಯ ಸುಳ್ಳುಗಳನ್ನು ನಂಬದೇ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ, ಪರಶುರಾಮ ಹೊಸಮನಿ, ಹಾಜಿಲಾಲ ದಳವಾಯಿ, ರಮೇಶ್ ಹೊನ್ನಮೋರೆ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment