ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೇ ಸತ್ಯ | ಲಕ್ಷ್ಮಣ ಸವದಿ ಭವಿಷ್ಯ
ವಿಜಯಪುರ: ಹಿಂದುತ್ವದ ಬಗ್ಗೆ ಬಿಜೆಪಿಯವರು ಮಾತನಾಡಲು ಅವರೇನು ಅದನ್ನು ಖರೀದಿ ಮಾಡಿಲ್ಲ. ಎಲ್ಲ ಪಕ್ಷದಲ್ಲೂ ಹಿಂದುಗಳಿದ್ದಾರೆ ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಬುಧವಾರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಹಾಗೂ ಬಿಜೆಪಿ ಆಡಳಿತ ವಿರೋಧಿ ಅಲೆ ಇದೆ. 140ರಿಂದ 150 ಸ್ಥಾನ ಗಳಿಸುತ್ತಿವೆ. ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆಗಳಿಗೆ ಜನ ಸ್ಪಂದಿಸುತ್ತಿದ್ದಾರೆ. ಈ ಬಾರಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮತದಾರರು ಕಾಂಗ್ರೆಸ್‌ಗೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ಭವಿಷ್ಯ ನುಡಿದರು.
ಬಿಜೆಪಿ ಆಂತರಿಕ ಕಚ್ಚಾಟದಿಂದ ಜರ್ಜರಿತವಾಗಿದ್ದು, 50 ರಿಂದ 60 ಸೀಟು ಬರುವುದು ಕಷ್ಟ ಇದೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಬಾಗ್ಯ, ಕೃಷಿ ಭಾಗ್ಯ ಯೋಜನೆ ಜನರಿಗೆ, ರೈತಾಪಿ ವರ್ಗಕ್ಕೆ ಹೆಚ್ಚು ಅನುಕೂಲ ಆಗಿದೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತ ಪರ ಕಾರ್ಯಕ್ರಮ ಸಂಪೂರ್ಣ ನಿಂತುಹೋಗಿವೆ ಎಂದು ಆರೋಪಿಸಿದರು.
ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು.
ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ನಾನು ಅಥಣಿ ಕ್ಷೇತ್ರದ ಅಭಿವೃದ್ಧಿ ಕುರಿತು ಬೇಡಿಕೆ ಇಟ್ಟಿದ್ದೇನೆಯೇ ಹೊರತು ಬೇರಾವ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು.
ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಸಂಪೂರ್ಣ ವಿಫಲ :ಎಂ.ಬಿ.ಪಾಟೀಲ
ದೇಶದ ಆಡಳಿತ ನಡೆಸಬೇಕಾದ ಪ್ರಧಾನಿ, ದೇಶದ ಬಾಹ್ಯ ಮತ್ತು ಆಂತರಿಕ ರಕ್ಷಣೆ ನೋಡಿಕೊಳ್ಳಬೇಕಾದ ಗೃಹ ಸಚಿವ, ರಕ್ಷಣಾ ಸಚಿವರು ರಾಜ್ಯದಲ್ಲೇ ಕೂತು ಚುನಾವಣೆ ನಡೆಸುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತದ ಬೆಂಬಲ ವ್ಯಕ್ತವಾಗುತ್ತಿದೆ. ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಸೇರ್ಪಡೆಯಿಂದ ಪಕ್ಷಕ್ಕೆ ಒಂದು ಹೊಸ ಶಕ್ತಿ ಬಂದಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಹೆಚ್ಚು ಅನುಕೂಲವಾಗಿದೆ ಎಂದರು.
ವಿಜಯಪುರ ಜಿಲ್ಲೆಯಲ್ಲಿ 2018ರಲ್ಲಿ ಕಾಂಗ್ರೆಸ್‌ಗೆ ಮೂರು ಕ್ಷೇತ್ರದಲ್ಲಿ ಜಯ ಲಭಿಸಿತ್ತು. ಆದರೆ, ಈ ಬಾರಿ ಎಂಟೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.
ಕೇಂದ್ರ, ರಾಜ್ಯ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಸರ್ಕಾರಿ ಉದ್ಯಮಗಳ ಮಾರಾಟ, ನೋಟ್ ಬ್ಯಾನ್‌ನಿಂದ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮೋದಿ ಅವರ ಅಚ್ಛೆ ದಿನ್ ಜನರ ಪಾಲಿಗೆ ಬಂದಿಲ್ಲ ಎಂದರು.
40 ಪರ್ಸೆಂಟ್ ರಾಜ್ಯ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತುಹಾಕಲು ಜನ ಸಜ್ಜಾಗಿದ್ದಾರೆ ಎಂದು ಹೇಳಿದರು.
ವಿಜಯಪುರ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಆಲಗೂರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.