ಪ್ರಸ್ತುತ ಕರ್ನಾಟಕದ ಒಟ್ಟು ಸಾಲ ರೂ.6 ಲಕ್ಷ 65 ಸಾವಿರ ಕೋಟಿಗೆ ಏರಿಕೆ | ಪ್ರತಿ ಕನ್ನಡಿಗನ ಮೇಲೆ ರೂ.1 ಲಕ್ಷ ಸಾಲದ ಹೊರೆ | ರಾಜ್ಯ ಸಂಪೂರ್ಣ ದಿವಾಳಿ | ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕೆB
ಬೆಂಗಳೂರು: ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಕಾಂಗ್ರೆಸ್ ಸರ್ಕಾರದ ಒನ್ ಲೈನ್ ಅಜೆಂಡಾವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ಈ ಕುರಿತ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಅಶೋಕ್, ಸಾಲ ಮಾಡುವುದನ್ನೇ ಫುಲ್ ಟೈಂ ಕಾಯಕವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹೊರೆಸಿದೆ ಎಂದು ಆರೋಪಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್ 1 ಆಗಿತ್ತು, ಆದರೆ ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್ 1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದಿದ್ದಾರೆ.
ಹಿಂದಿನ ಅವಧಿಯಲ್ಲಿ ಕೇಂದ್ರದ ಎನ್ ಡಿಎ ಸರ್ಕಾರ ಕೃಷಿ ಕಾಯ್ದೆಗಳ ತಿದ್ದುಪಡಿಗೆ ಮುಂದಾದಾಗ ಅದನ್ನ ವಿರೋಧಿಸಿ, ಬೀದಿ ರಂಪಾಟ ಮಾಡಿ, ತನ್ನ ರಾಜಕೀಯ ತೆವಲಿಗೆ ಸ್ಥಾಪಿತವಾದ ಹಿತಾಸಕ್ತಿಗಳ ರಕ್ಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷ, ಈಗ ಅದೇ ಮೂರು ಕೃಷಿ ಕಾಯ್ದೆಗಳ ಅನ್ವಯ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕೃಷಿ ಬೆಲೆ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ಸೂಚನೆ ನೀಡಿದೆ.
ತನ್ನ ರಾಜಕೀಯ ಲಾಭಕ್ಕಾಗಿ ಅನ್ನದಾತರ ಹಿತಾಸಕ್ತಿಯನ್ನು ಬಲಿಕೊಟ್ಟು, ಪಟ್ಟಭದ್ರ ಹಿತಾಸಕ್ತಿಗಳ ಜೊತೆ ಕೈಜೋಡಿಸಿದ್ದ ಕಾಂಗ್ರೆಸ್ ಪಕ್ಷದ ಅಸಲಿ ಬಣ್ಣ ಈಗ ಬಯಲಾಗಿದೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2028ವರೆಗೆ ಉಳಿಯೊಲ್ಲ :ಎಚ್ಡಿಕೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚುತ್ತಿರುವ ಅತೃಪ್ತಿಯೇ ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ 2028 ರವರೆಗೂ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಇದು ಯಾವಾಗ ಸ್ಫೋಟಗೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ, ಆದರೆ ಕಾದು ನೋಡೋಣ. ಪ್ರತಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಹೇಳುವುದು ಸರಿಯಲ್ಲ ಎಂದರು.
‘ನಾವು ಅವರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿರುವುದು ನಿಜವಲ್ಲ; ಅವರ ಶಾಸಕರು ಮತ್ತು ಜನರೇ ಈ ಸರ್ಕಾರದ ಅಡಿಪಾಯವನ್ನು ಅಸ್ಥಿರಗೊಳಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟಿನಿಂದಾಗಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ, ಇದು ಪಕ್ಷದೊಳಗೆ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ’ ಎಂದು ದೂರಿದರು.
ಸರ್ಕಾರದ ಕಾರ್ಯವೈಖರಿ ಬಗ್ಗೆ ಶಾಸಕರಲ್ಲಿ ವ್ಯಾಪಕ ಅಸಮಾಧಾನವಿದ್ದು, ಶೀಘ್ರವೇ ಅದು ಬಯಲಿಗೆ ಬರಲಿದೆ. ಸರ್ಕಾರ ಬೀಳಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.