ಕರ್ನಾಟಕ ಸರ್ಕಾರದ ಅಂದಾಜು ಸಮಿತಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಎಚ್ಚರಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬರುವ ಟೋಲ್ ನಾಕಾ ಸಿಬ್ಬಂದಿಗಳು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ನೀಡುತ್ತಿರುವುದಾಗಿ ಕಂಡುಬಂದಿದೆ. ಈ ಕುರಿತು ಕ್ರಮ ವಹಿಸುವಂತೆ ಕರ್ನಾಟಕ ಸರ್ಕಾರದ ಅಂದಾಜು ಸಮಿತಿ ಸಭೆಯ ಅಧ್ಯಕ್ಷ ಹಾಗೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಅಂದಾಜು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಇನ್ನೀತರ ಇಲಾಖೆಯ ಅಧಿಕಾರಿಗಳು ಟೋಲ್ ನಾಕಾದಲ್ಲಿ ಆಗುತ್ತಿರುವ ವಾಹನಗಳ ಸಂಚಾರ ಅಡಚಣೆಯ ಕುರಿತು ಸೂಕ್ತ ಕ್ರಮ ವಹಿಸಲು ಸೂಚಿಸಿದರು. ಹಾಗೂ ಕೈಗೊಂಡ ಕ್ರಮಗಳ ಕುರಿತು ಮುಂದಿನ ಸಭೆಯಲ್ಲಿ ವಿವರವಾದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಬರುವ ಟೋಲ್ ನಾಕಾ ಸಿಬ್ಬಂಧಿಗಳಿಂದ ಸಾರ್ವಜನಿಕರಿಗೆ ಹಾಗೂ ಜನಪ್ರತಿನಿಧಿಗಳ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಲು ಸೂಕ್ತ ನಿರ್ದೇಶನ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲು ಅವರು ತಿಳಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರುಗಳಾದ ಬಿಳಗಿ ಮತಕ್ಷೇತ್ರ ಶಾಸಕ ಜೆ.ಟಿ.ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಕರ್ನಾಟಕ ಸರ್ಕಾರ ಸಚಿವಾಲಯದ ಸಮಿತಿಗೆ ಸಂಬಂಧಿಸಿದ್ದ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಲೋಕೊಪಯೋಗಿ ಇಲಾಖೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

