ನಮ್ಮ ಮೆಟ್ರೋ ಪ್ರಯಾಣ ದರ ಏಕಾಏಕಿ ಹೆಚ್ಚಳ | ಜನರಿಂದ ಆಕ್ರೋಶ | ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಏಕಾಏಕಿ ಶೇ. 50ರಷ್ಟು ಹೆಚ್ಚು ಮಾಡಿದ್ದು, ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.
ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿದ್ದಾರೆ.
ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ. ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

“2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಮೆಟ್ರೋ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?”
– ಸಿದ್ದರಾಮಯ್ಯ
ಮುಖ್ಯಮಂತ್ರಿಗಳು

ಮೆಟ್ರೋ ಪ್ರಯಾಣ ದರ ಇಳಿಸಲು ಬಿಜೆಪಿ ನಿಯೋಗ ಮನವಿ
ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಮೆಟ್ರೋ ದರವನ್ನು ಏಕಾಏಕಿ ಶೇ. 50ರಷ್ಟು ಹೆಚ್ಚು ಮಾಡಿದ್ದು, ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು ಸೋಮವಾರ ನಮ್ಮ ಮೆಟ್ರೋ ಪ್ರಧಾನ ಕಚೇರಿಗೆ ಭೇಟಿ ನೀಡಿ, ದರ ಇಳಿಸುವಂತೆ ಮನವಿಪತ್ರ ಸಲ್ಲಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಶಾಸಕರಾದ ಸಿ.ಕೆ.ರಾಮಮೂರ್ತಿ, ರವಿಸುಬ್ರಹ್ಮಣ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಸ್.ಹರೀಶ್ ಮತ್ತು ಮಾಜಿ ಮೇಯರ್ ಗೌತಮ್ ಕುಮಾರ್ ಮತ್ತಿತರರಿಂದ ನಿಯೋಗ, ಬಿಎಂಆರ್‌ಸಿಎಲ್ ಎಂಡಿಗೆ ಮನವಿ ಪತ್ರ ಸಲ್ಲಿಸಿದೆ.