ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನಿಗದಿತ ಅವಧಿಯಲ್ಲಿ ಗುರಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ನೀಡಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ, ಜನನಿ ಸುರಕ್ಷಾ ಯೋಜನೆ ಹಾಗೂ ಹೆರಿಗೆಗಳ ವಿವರ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಬಸ್ ನಿಲ್ದಾಣದಿಂದ ಅನುಗ್ರಹ ಕಣ್ಣಿನ ಆಸ್ಪತ್ರೆವರೆಗೆ ರಸ್ತೆ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲು ಕ್ರಮ ವಹಿಸಲಾಗುವುದು. ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ರೈತರಿಗೆ ಶೇ.೯೦ ರಷ್ಟು ಸಬ್ಸಿಡಿಯಲ್ಲಿ ಹನಿ ನೀರಾವರಿ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಸರ್ಕಾರದ ವಿವಿಧ ಯೋಜನೆಗಳಿದ್ದು, ಈ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಲು ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ ಅವರು, ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಗುರಿಯನ್ನು ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸದಸ್ಯರಾದ ರಫೀ ಭಂಡಾರಿ ಅವರು ಮಾತನಾಡಿ, ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಸೊಸಾಯಿಟಿಗಳ ಕಾರ್ಯನಿರ್ವಹಣೆ-ಸ್ಥಿತಿಗತಿ ಕುರಿತು ಸಹಕಾರ ಇಲಾಖೆ ಪರಿಶೀಲನೆ ನಡೆಸಿ, ಮುಂದಿನ ಸಭೆಯಲ್ಲಿ ವಿವರ ಒದಗಿಸಬೇಕು. ನಗರದ ಅತಾವುಲ್ಲಾ ವೃತ್ತದಿಂದ ಬಡಿಕಮಾನವರೆಗಿನ ರಸ್ತೆ ಹಾಳಾಗಿದ್ದು, ದುರಸ್ತಿಗೆ ಕ್ರಮ ವಹಿಸಬೇಕು. ಜಿಲ್ಲೆಯ ಉರ್ದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಇನ್ನೋರ್ವ ಸದಸ್ಯರಾದ ಅಲ್ಲಾಬಕ್ಷ ಬಿಜಾಪುರ ಅವರು ಮಾತನಾಡಿ, ಜಿಲ್ಲೆಯ ಮದರಸಾ ಶಾಲೆಗಳಲ್ಲಿ ಪಠ್ಯಪುಸ್ತಕ, ಗುಣಮಟ್ಟದ ಶಿಕ್ಷಣ ಒದಗಿಸಲು ಒತ್ತು ನೀಡಲು ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಸದಸ್ಯರುಗಳಾಧ ಜಂಬುಕುಮಾರ ಬಾಗೇವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

