ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ಸರಕಾರದ ನಡೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ೯ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ಹಾಗೂ ಬಿಕ್ಷಾಟನೆ ಮಾಡುವ ಮೂಲಕ ವಂತಿಕೆ ಹಣ ಜಮೆ ಮಾಡಿ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂದೀಪ ಅರಳಗುಂಡಿ ಮಾತನಾಡಿ, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳು ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ, ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನ ನೀಡುವುದು ಸರ್ಕಾರಗಳ ಆದ್ಯ ಕರ್ತವ್ಯ, ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಇಂದಿನ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.
ವಿದ್ಯಾರ್ಥಿನಿ ಸ್ನೇಹಾ ಹಿರೇಮಠ ಮಾತನಾಡಿ, ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಮಾನ್ಯ ಡಿ.ಕೆ ಶಿವಕುಮಾರ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯು ಆರ್ಥಿಕ ಹಾಗೂ ಮೂಲಭೂತ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ. ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋ ಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತದೆ. ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನ ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂಬುದು ಎಬಿವಿಪಿಯ ಆಶಯವಾಗಿದೆ ಎಂದರು.
ವಿದ್ಯಾರ್ಥಿನಿ ದಾನಮ್ಮ ಹೊಸಮನಿ & ಐಶ್ವರ್ಯ ಆಸಂಗಿ ಮಾತನಾಡಿ, ಸಾಮಾನ್ಯವಾಗಿ ೧೦,೦೦೦ ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯಗಳು ಇರಬೇಕೆಂಬುವುದು ಆದರ್ಶವಾದ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು ೨೦೦ ಕಿಮೀ ವಿಧ್ಯಾರ್ಥಿಗಳು ಪ್ರಯಾಣ ಮಾಡಬೇಕು,ಇಂತಹ ಸಮಸ್ಯೆ ಪರಿಹಾರಕ್ಕೆ ಹೊಸ ವಿವಿಗಳು ಸಹಕಾರಿಯಾಗಬೇಕು, ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಅತಂತ್ರಗೊಳಿಸಬಾರದು, ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವ ರಾಜ್ಯ ಸರ್ಕಾರ ಎರಡು ವರ್ಷ ಕಳೆದರೂ ಸಹಿತ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಕಿಂಚಿತ್ತು ಗಮನಕೊಡದೆ ಈಗ ಮೂಲಭೂತ ಸೌಲಭ್ಯಗಳ ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ, ಶಿಕ್ಷಣ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಸುರೇಶ ಲೋಣಾರ, ಪ್ರಶಾಂತ ಗುಗದಡ್ಡಿ, ಮೋಹನ ಚಿಕ್ಕಲಕಿ, ಮಲ್ಲೇಶ ಉಪ್ಪಾರ,ತ್ರೀಶೀಲಾ ರಾಠೋಡ, ಶೃಷ್ಟಿ, ಅಶ್ವಿನಿ ಜಾಧವ, ವಿರೇಶ ತಂಬಾಕೆ, ವಿಶ್ವನಾಥ, ಸಂದೀಪ, ಹರ್ಷ ಕುಲಕರ್ಣಿ, ವಿಜಯ ರಾಠೋಡ, ಭರತ ರತ್ನಾಕರ, ಸಮೇದ ಸನ್ನದಿ, ಸಮೇತ ಕೋಟೆ, ಸುಮಾರು ೧೦೦ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

