ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಆಲಮೇಲ ಹಾಗೂ ಸಿಂದಗಿ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೊಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಆಲಮೇಲ ತಾಲೂಕಿನ ಕುಳೇಕುಮಟಗಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಭೂಸ್ವಾಧೀನದ ರಸ್ತೆ ಸಮಸ್ಯೆ ಕುರಿತಾಗಿ ಸ್ಥಳ ಪರಿಶೀಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.ಆಲಮೇಲದಲ್ಲಿ ಇಂದಿರಾ ಕ್ಯಾಂಟಿನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಲಮೇಲದ ಆಡಳಿತ ಸೌಧ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಮೀನು ಸರ್ವೆ ನಂಬರ್ ೬೦೬/೩.೦೩ ಗುಂಟೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.ಸಣ್ಣ ನೀರಾವರಿ ಇಲಾಖೆಯಡಿ ಬರುವ ಕೆರೆ ವೀಕ್ಷಿಸಿದ ಅವರು,ಕೆರೆ ಅಭಿವೃದ್ಧಿಪಡಿಸುವುದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಂದಗಿಯ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಪರಿಶೀಲನೆ ಮಾಡಿದರು. ಬಾಕಿ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಕಟ್ಟಡ ಉದ್ಘಾಟನೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಿಂದಗಿಯ ತಾಲೂಕಾಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಾಲೂಕಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

