ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸೌಂದರ್ಯಿಕರಣಕ್ಕಾಗಿ ಸ್ವಚ್ಛತೆ, ರಸ್ತೆ ನಿರ್ಮಾಣ, ಉದ್ಯಾನವನಗಳ ನಿರ್ವಹಣೆ ಸೇರಿದಂತೆ ಜನದಟ್ಟಣೆಯನ್ನು ನಿಯಂತ್ರಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಮಧ್ಯ ಭಾಗದಲ್ಲಿ ಸುಸಜ್ಜಿತವಾದ ಕಾರ ಪಾರ್ಕಿಂಗ್ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸೂಕ್ತವಾದ ಯೋಜನೆಯೊಂದು ರೂಪಿಸಿಕೊಂಡು ವಿಜಯಪುರ ನಗರದ ಸೌಂದರ್ಯಿಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ನಗರದ ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆ ರೂಪಿಸಿರುವ ಅಡ್ವಾನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ನಗರದಲ್ಲಿ ಮಳೆಗಾಲದಲ್ಲಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳಾದ ಸರ್ಕಾರಿ ಆಸ್ತಿ, ರಾಜ್ ಕಾಲುವೆ ಪ್ರದೇಶದಲ್ಲಿನ ರಾಜಕಾಲುವೆ ನಿರ್ಮಾಣದ ಅನುಷ್ಠಾನದಲ್ಲಿ ಉಂಟಾದ ನ್ಯಾಯಾಲಯದ ತಡೆಯಾಜ್ಞೆಯನ್ನು ಪ್ರಥಮ ಆದ್ಯತೆ ಮೇಲೆ ತೆರವುಗೊಳಿಸಲು ಕ್ರಮ ವಹಿಸಬೇಕು. ತಡೆ ಆಜ್ಞೆ ತೆರವಾದ ನಂತರ ಅತಿಕ್ರಮಣ ತೆರವುಗೊಳಿಸಿ ರಾಜಕಾಲುವೆ ಕಾಮಗಾರಿ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ವಿಮಾನ ನಿಲ್ದಾಣಕ್ಕೆ ಹೋಗಿ ಬರಲು ಪಾಲಿಕೆ ವ್ಯಾಪ್ತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ತಕ್ಷಣ ಆರ್ಥಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದು, ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಪ್ರಾಧಿಕಾರ ಆಕರಿಸುವ ತೆರಿಗೆ ಸಂಗ್ರಹಣೆ ಸೇರಿದಂತೆ ವಿವಿಧ ಆದಾಯವನ್ನು ಮುಖ್ಯವಾಗಿ ಕುಡಿಯುವ ನೀರು, ಒಳಚರಂಡಿಗೆ ಆದ್ಯತೆ ನೀಡಿ ವೆಚ್ಚ ಮಾಡಬೇಕು.
ವಿಜಯಪುರ ನಗರದ ಹೃದಯ ಭಾಗದಲ್ಲಿರುವ ಲಾಲ್ ಬಹಾದ್ದೂರ ಶಾಸ್ತಿç ಮಾರುಕಟ್ಟೆ ಅಭಿವೃದ್ದಿಗೆ ಸೂಕ್ತ ಕ್ರೀಯಾಯೋಜನೆ ರೂಪಿಸಬೇಕು. ನಗರದಲ್ಲಿರುವ ಬೀದಿದೀಪಗಳ ಸೂಕ್ತ ನಿರ್ವಹಣೆ ಮಾಡಬೇಕು. ಅವಶ್ಯಕತೆ ಇರುವ ಕಡೆ ಬೀದಿ ದೀಪಗಳ ಅಳವಡಿಕೆ ಮಾಡಬೇಕು. ಪುನರ್‌ವಸತಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಪಾಲಿಕೆ ಮತ್ತು ನಗರಾಭಿವೃದ್ದಿ ಪ್ರಾಧಿಕಾರಗಳಿಂದ ಅನುಮತಿ ಪಡೆದ ನಿವೇಶನಗಳ ಅಭಿವೃದ್ದಿಗೆ ಕ್ರಮ ವಹಿಸಬೇಕು. ಪಾಲಿಕೆ ಹಾಗೂ ನಗರಾಭಿವೃದ್ದಿ ಪ್ರಾಧಿಕಾರಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ನಗರದ ಸರ್ವಾಂಗೀಣ ಅಭಿವೃದ್ದಿಗಾಗಿ ಶ್ರಮವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಮಹಾದೇವ ರಾಠೋಡ, ಸಲೀಮ ಪೀರಜಾದೆ, ಸಂತೊಷ ಪವಾರ, ಶ್ರೀಮತಿ ಕಾಶಿಬಾಯಿ ಹಡಪದ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

