ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಡೇ-ನಲ್ಮ ಯೋಜನೆಯ ಎಲ್ಲ ಉಪಘಟಕಗಳ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಪಿಎಂ ಸ್ವನಿಧಿ, ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ ೮ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಸೂಚನೆ ನೀಡಲಾಯಿತು.
ಅಮೃತ ೨.೦ ಯೋಜನೆಯ ಅಮೃತ್ ಮಿತ್ರ ಕಾರ್ಯಕ್ರಮದಡಿ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ಅರ್ಹತೆ ಪಡೆದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಾಮಗಾರಿ ಆದೇಶ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಳ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆಗೆ ಸೂಕ್ತ ಸ್ಥಳ ಗುರುತಿಸುವುದು, ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಸೂಕ್ತ ಪ್ರಚಾರ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ, ವಿಜಯಪುರ ಡಿಸ್ಟಿçಕ್ ಇಂಡಸ್ಟ್ರಿಯಲ್ ಓನರ್ ಅಸೋಸಿಯೇಶನ್ ಅಧ್ಯಕ್ಷರಾದ ಎಸ್.ವಿ.ಪಾಟೀಲ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

