ಮಾ.೧ರಿಂದ ೨೦ರವರೆಗೆ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇದೇ ಮಾ.೧ರಿಂದ ೨೦ರವರೆಗೆ ಜಿಲ್ಲೆಯ ೬೩ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆಗಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ನಿಷೇಧಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಗಳು, ಎಲೆಕ್ಟಾçನಿಕ್ ಗೆಜೆಟ್‌ಗಳನ್ನು, ಮೊಬೈಲ್ ಪೋನ್, ಡಿಜಿಟಲ್ ವಾಚ್ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಹಾಗೂ ಈ ಬಾರಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಇರಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆ, ಇಂಟರ್ ನೆಟ್, ಸೂಕ್ತ ಗಾಳಿ-ಬೆಳಕಿನ ವ್ಯವಸ್ಥೆಯನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾಡಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

