ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾದ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಲಹೆ ಸೂಚನೆಗಳನ್ನು ನೀಡಲಾಗಿದೆ.
ದಿನದಿಂದ ದಿನಕ್ಕೆ ಬಿಸಿಲಿನಲ್ಲಿ ಬದಲಾವಣೆಯಾಗುತ್ತಿದ್ದು, ಸಾರ್ವಜನಿಕರು ರೇಡಿಯೋ, ಟಿವಿ, ದಿನಪತ್ರಿಕೆ ಸೇರಿದಂತೆ ವಿವಿಧ ಮಾಧ್ಯಮಗಳಿಂದ ಒದಗಿಸಲಾಗುವ ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಬಿಸಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ ಅಥವಾ ಚಪ್ಪಲಗಳನ್ನು ಧರಿಸಿ, ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ಸಮಯದಲ್ಲಿ ಮಾಡುವುದು ಉತ್ತಮ. ಒಂದು ವೇಳೆ ದಿನದಲ್ಲಿ ಪ್ರಯಾಣ ಅನಿವಾರ್ಯವಿದ್ದಲ್ಲಿ ನಿಮ್ಮೊಂದಿಗೆ ನೀರನ್ನು ಒಯ್ಯಿರಿ, ನೀವು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತೊಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ.
ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಆಗ್ಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಆದಷ್ಟು ಕೆಲಸವನ್ನು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದಲ್ಲಿ ತಂಪಾದ ಕುಡಿಯುವ ನೀರು ಇರುವಂತೆ ನೋಡಿಕೊಳ್ಳಿ. ಕೆಲಸ ನಿರ್ವಹಿಸುವ ಗರ್ಭೀಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಲೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭೀಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವರು ಹೆಚ್ಚಿನ ಜಾಗರೂಕತೆ ವಹಿಸಬೇಕು.
ಕಪ್ಪು ಅಥವಾ ಬಿಗಿಯಾದ ಬಟ್ಟೆ ಧರಿಸುವುದನ್ನು ತಪ್ಪಿಸಬೇಕು. ತಾಪಮಾನ ಹೆಚ್ಚಾದ ಸಂದರ್ಭದಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ಹಾಗೂ ಬಿಸಿಲಿನಲ್ಲಿ ಅಡುಗೆ ಮಾಡುವುದು, ಮಧ್ಯಾಹ್ನ ೧೨ ರಿಂದ ೩ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ, ದೇಹವನ್ನು ನಿರ್ಜಲೀಕರಣಗೊಳಿಸುವ ಅಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಬಿಸಿಲಿನಲ್ಲಿ ಹೊರಾಂಣ ಚಟುವಟಿಕೆಗಳನ್ನು ಮಾಡಬಾರದು. ಚಪ್ಪಲಿ ಧರಿಸದೇ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ, ಹೆಚ್ಚು ಪ್ರೋಟಿನ್‌ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸದಂತೆ ಸಲಹೆ ನೀಡಿದ್ದು, ಇಷ್ಟೇ ಅಲ್ಲದೇ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ನೀಡುವ ಸಲಹೆ ಸೂಚನೆಗಳನ್ನು ಪಾಲಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.