ಡಿಕೆಶಿ ವಜಾಗೊಳಿಸಿ ಅಥವಾ ಸಂವಿಧಾನ ಬದಲಾಯಿಸುವ ಯೋಜನೆ ಬಹಿರಂಗಪಡಿಸಿ | ಸದನದಲ್ಲಿ ಸಚಿವ ರಿಜಿಜು ತಪರಾಕಿ
ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಆಡಳಿತಾರೂಢ ಬಿಜೆಪಿ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ್ದರಿಂದ ಗದ್ದಲ, ಕೋಲಾಹಲ ಉಂಟಾಯಿತು. ಲೋಕಸಭೆಯನ್ನು ಪದೇ ಪದೇ ಮುಂದೂಡಲಾಯಿತು.
ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಸಂವಿಧಾನವನ್ನು ಬದಲಾಯಿಸುವುದಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.
ಆ ವ್ಯಕ್ತಿಯನ್ನು ವಜಾಗೊಳಿಸುವ ಬಗ್ಗೆ ಕಾಂಗ್ರೆಸ್ ಸ್ಪಷ್ಪಪಡಿಸಬೇಕು ಎಂದು ಒತ್ತಾಯಿಸಿದ ರಿಜಿಜು, ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುವ ನೀವು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ಜೀಬಿನಲ್ಲಿಟ್ಟುಕೊಂಡು ನಾಟಕವಾಡುತ್ತೀರಿ ಎಂದು ರಿಜಿಜು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕೆಲವು ಕಾಂಗ್ರೆಸ್ ಸದಸ್ಯರು ರಿಜಿಜು ವಿರುದ್ಧ ಮುಗಿ ಬಿದ್ದಾಗ ಸದನದಲ್ಲಿ ಗದ್ದಲ ಉಂಟಾಯಿತು. ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು

ರಾಜ್ಯಸಭೆಯಲ್ಲೂ ಕೋಲಾಹಲ
ಅತ್ತ ರಾಜ್ಯಸಭೆಯಲ್ಲೂ ಇದೇ ವಿಚಾರ ಪ್ರಸ್ತಾಪವಾಗಿ ಗದ್ದಲ, ಕೋಲಾಹಲ ಉಂಟಾಯಿತು. ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ ಜೆಪಿ ನಡ್ಡಾ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಹಗರುವಾಗಿ ತೆಗೆದುಕೊಳ್ಳುವುದಿಲ್ಲ. ಇದರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಪಪಡಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಗದಲ್ಲ ಉಂಟಾದರಿಂದ ಸಭಾಪತಿ ಜಗದೀಪ್ ಧಂಖರ್ ಮಧ್ಯಾಹ್ನ 2ಗಂಟೆಯವರೆಗೂ ಕಲಾಪ ಮುಂದೂಡಿದರು.

ಸತ್ಯಕ್ಕೆ ದೂರವಾದ ಮಾತು :ಎಚ್ಡಿಕೆ
ಬೆಂಗಳೂರು: ಗುತ್ತಿಗೆ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರ ಹೋರಾಟದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ. ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ ಎಂದು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

