ವಿಜಯಪುರದಲ್ಲಿ ವಿಶ್ವ ಕ್ಷಯರೋಗ ದಿನ ಆಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮ ಪಂಚಾಯತಿ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳು ಕ್ಷಯ ರೋಗವನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ವಿಭಾಗ ಹಾಗೂ ಜಿಲ್ಲಾ ಸರ್ಕಾರೇತರ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡ ವಿಶ್ವ ಕ್ಷಯರೋಗ ದಿನಾಚರಣೆ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ರೋಗವು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಸುಲಭವಾಗಿ ಹರಡುತ್ತದೆ. ಪ್ರತಿ ವರ್ಷ ನಮ್ಮ ದೇಶದಲ್ಲಿ ಕ್ಷಯ ರೋಗದಿಂದ ಅನೇಕ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ರೋಗ ಮೈಕೋಬ್ಯಾಕ್ಟೀರಿಯಂ ಟ್ಯುಬರ್ಕುಲೋಸಿಸ್ ಎಂಬ ರೋಗದಿಂದ ಬರುತ್ತದೆ. ಇದು ವಾಸಿಯಾಗುವಂತಹ ರೋಗವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು ಸಾರ್ವಜನಿಕರಲ್ಲಿ ಈ ರೋಗದ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ. ವಿಜಯಕುಮಾರ ಅಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ ಗುಣಾರಿ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿಗಳು, ಜಿಲ್ಲೆಯ ವಿವಿಧ ನರ್ಸಿಂಗ ಕಾಲೇಜಿನ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

