ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ನಾಗಠಾಣದಲ್ಲಿ ಸುಮಾರು ೧೦ ಗುಂಟೆ ಜಾಗದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾದ ನಾಗಠಾಣ ಬಸ್ ನಿಲ್ದಾಣಕ್ಕೆ ಮಂಗಳವಾರ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಗ್ರಾಮದ ಬಹುದಿನಗಳ ಬೇಡಿಕೆಯಾದ ಸುಸಜ್ಜಿತ ಬಸ್ ನಿಲ್ದಾಣ ೧.೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ಉದ್ಘಾಟನೆ ನೆರವೇರಿಸಲಾಗಿದ್ದು, ಗ್ರಾಮದ ನಾಗರಿಕರು ಬಸ್ ನಿಲ್ಧಾಣದ ಸ್ವಚ್ಚತೆ ಕಾಪಾಡಿಕೊಂಡು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ನಾಗಠಾಣ ಕ್ಷೇತ್ರದ ಶಾಸಕರಾದ ವಿಠ್ಠಲ ದೋಂಡಿಬಾ ಕಟಕದೊಂಡ ಮಾತನಾಡಿ, ಆದಷ್ಟು ಶೀಘ್ರವಾಗಿ ಕುಡಿಯುವ ನೀರಿನ ಸಮಸ್ಯೆಗಳನ್ನು ನಿವಾರಿಸಲು ಈ ಬಾಗದ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದರಿಂದ ಈ ಭಾಗದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಅದರೊಂದಿಗೆ ರಸ್ತೆ ದುರಸ್ತಿ ಹಾಗೂ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಾರದಾ ಗಿರಿಸಾಗರ, ಕ.ಕ.ರ.ಸಾ ವ್ಯವಸ್ಥಾಪಕ ನಿರ್ದೇಶಕರಾದ ಎಮ್ ರಾಚಪ್ಪ, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ತಹಶೀಲ್ಧಾರ ಪ್ರಶಾಂತ ಚನಗೊಂಡ, ಕ.ಕ.ರ.ಸಾ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

