ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರಕ್ಕೆ ಬೆಂಗಳೂರಿನ ಬಸವ ವೇದಿಕೆ ನೀಡುವ ವಚನ ಸಾಹಿತ್ಯಶ್ರೀ ಪ್ರಶಸ್ತಿ-2025 ಘೋಷಣೆ ಮಾಡಲಾಗಿದೆ.
03.05.2005 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 11ಕ್ಕೆ ನಡೆಇರುವ ಬಸವ ಜಯಂತಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗುವುದು.
ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಕಾಲಗರ್ಭದಲ್ಲಿ ನಶಿಸಿ ಹೋಗುತ್ತಿದ್ದ ಬಸವಾದಿ ಶರಣರ ವಚನಗಳನ್ನು ಸಂಶೋಧಿಸಿ ಪ್ರಕಟಿಸುವ ಮೂಲಕ ವಚನಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಹಳಕಟ್ಟಿ ಅವರು ಸ್ಥಾಪಿಸಿದ ಬಿ.ಎಲ್.ಡಿ.ಇ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು, ನಾಡು ಮತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ.
ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಹಳಕಟ್ಟಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಸಂಶೋಧನಾ ಕೇಂದ್ರ ಈಗ ವಚನ ಸಾಹಿತ್ಯ ಪ್ರಸಾರ ಮತ್ತು ಪ್ರಕಟಣೆಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಅಲ್ಲದೇ, ಈ ಕೇಂದ್ರ ಕನ್ನಡ ನಾಡಿನ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆಯನ್ನೂ ಪಡೆದಿದೆ. ಈಗಾಗಲೇ ಅನೇಕ ಸಂಸ್ಥೆಗಳು ಈ ಕೇಂದ್ರಕ್ಕೆ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಸಂಶೋಧನಾ ಕೇಂದ್ರ ಪ್ರಾರಂಭಿಸಿ ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಸೇವೆ ಮತ್ತು ವಚನ ಸಾಹಿತ್ಯ ಪ್ರಕಟಣೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಬಸವ ವೇದಿಕೆಯ ಅಧ್ಯಕ್ಷ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.