ವಿಜಯಪುರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವದ ಸರ್ವಶ್ರೇಷ್ಠ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನಿಗೆ ಕೊಡುಗೆ ನೀಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಭದ್ರ ಬುನಾದಿ ಹಾಕಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಜೀವನ ಸಾಧನೆ ಸಮಗ್ರ ಚಿತ್ರಣ ಕಟ್ಟಿಕೊಡುವ ಹಾಗೂ ವಿಚಾರ-ಸಂದೇಶಗಳ ಮಾಹಿತಿಯನ್ನುವುಳ್ಳ, ನವೀಕರಣಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಯಂತಿ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.
ಸಮಾಜದಲ್ಲಿ ಸಮಾನತೆಯ ಹಕ್ಕಿನೊಂದಿಗೆ ರಾಷ್ಟ್ರದ ಏಳಿಗೆಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಮನುಷ್ಯನ ದೇಹದಲ್ಲಿ ಹೃದಯ ಎಷ್ಟು ಮುಖ್ಯವೋ ಅಷ್ಟೇ ಭಾರತಕ್ಕೆ ಸಂವಿಧಾನ ಮುಖ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು. ಜಾತಿ, ಮತ ಪಂಥಗಳನ್ನು ಮೀರಿ ನಿಂತ ಮೇಧಾವಿಗಳಾಗಿದ್ದಾರೆ. ಎಲ್ಲರಿಗೂ ಸಮಾನತೆ, ಸ್ವಾತಂತ್ರ್ಯ, ಅಭಿವ್ಯಕ್ತಿ ಮತ್ತು ಗೌರವಯುತವಾಗಿ ಹಾಗೂ ಘನತೆಯಿಂದ ಜೀವನ ನಡೆಸಲು ಸಂವಿಧಾನ ಒದಗಿಸಿಕೊಟಿದ್ದು, ಸಂವಿಧಾನದ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಶೋಷಿತರು, ಬಡವರು, ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿ, ಎಲ್ಲರ ಕನಸುಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಜೀವ ತುಂಬಿದ ಮಹಾನ್ ಮೇಧಾವಿ. ಇಂತಹ ಮಹಾಮಾನವತಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು-ಸಾಧನೆ, ವಿಚಾರ-ಆದರ್ಶಗಳ ಕುರಿತು ಅರಿವು ಮೂಡಿಸುವ ಅಭಿಲಾಷೆಯೊಂದಿಗೆ ನಿರ್ದೇಶನದ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಕೇವಲ ೨೦ ದಿನಗಳಲ್ಲಿ ಅಂಬೇಡ್ಕರ್ ಭವನವನ್ನು ನವೀಕರಣಗೊಳಿಸಲಾಗಿದೆ ಎಂದು ಹೇಳಿದರು.
ನವೀಕರಣಗೊಂಡ ಈ ಅಂಬೇಡ್ಕರ್ ಭವನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆ ಸಮಗ್ರ ಚಿತ್ರಣ ಕಟ್ಟಿಕೊಡುವ ಛಾಯಾಚಿತ್ರ ವಸ್ತು ಸಂಗ್ರಹಾಲಯ, ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸುಸಜ್ಜಿತ ಗ್ರಂಥಾಲಯ, ಡಾ.ಬಿ.ಆರ್. ಅವರ ಬದುಕು-ಬರಹ ೨೨ ಸಂಪುಟಗಳು ಸೇರಿದಂತೆ ಅವರ ಜೀವನ ಚರಿತ್ರೆ, ಸಾಧನೆಗಳ ಕುರಿತ ಪುಸ್ತಕಗಳು, ಸುಸಜ್ಜಿತವಾದ ಕಚೇರಿ, ಸಭಾಭವನ ಹೊಂದಿದೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯದಲ್ಲಿ ಪುಸ್ತಕ ಇರಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಆರ್ಥಿಕತೆ ಕುರಿತು ಉಪನ್ಯಾಸ ನೀಡಿದ ಚಿಂತಕಿ ಕೆ.ನೀಲಾ ಅವರು ಮಾತನಾಡಿ, ನಿಜವಾದ ಆರ್ಥಿಕ ಅಭಿವೃದ್ದಿ ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ಜೊತೆಯಾಗಿ ಕಾಣಸಿಗುತ್ತವೆ. ಬಸವರಣ್ಣನವರು ಬಹು ದೊಡ್ಡ ಆರ್ಥಿಕ ತಜ್ಞರಾಗಿದ್ದರು. ಕಾಯಕದ ಮಹತ್ವ ಕುರಿತು ಉದಾತ್ತ ಚಿಂತನೆಗಳನ್ನು ಹೊಂದಿದ್ದರು. ಜನರು ಘನತೆಯಿಂದ ಬದುಕಲು ಆರ್ಥಿಕ ಸ್ವಾತಂತ್ರ ಇರಬೇಕು ಎಂಬುದು ಅಂಬೇಡ್ಕರ್ ಅವರ ಉದಾತ್ತ ಚಿಂತನೆಯಾಗಿತ್ತು ಎಂದರು.
ಬಸವತತ್ವ ಪ್ರಚಾರಕ ಡಾ. ಜೆ.ಎಸ್.ಪಾಟೀಲ ಅವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ರಚನೆ ಕುರಿತು ಉಪನ್ಯಾಸ ನೀಡಿದರು.

“ಮಹಾ ಮಾನವತಾವಾದಿ ಬಸವಣ್ಣ ಹಾಗೂ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಎರಡು ಕಣ್ಣುಗಳಿದ್ದಂತೆ. ಬಸವಾದಿ ಶರಣರು ಜಾತಿ ರಹಿತವಾದ ಕಾಯಕ ತತ್ವವನ್ನು ಸಾರಿದವರು. ಬಸವಾದಿ ಶರಣರ ಚಿಂತನೆಗಳಾದ ಕಾಯಕ ಮತ್ತು ದಾಸೋಹದ ಪರಿಕಲ್ಪನೆಯ ತಳಹದಿ ಸಂವಿಧಾನದಲ್ಲಿ ಅಡಕವಾಗಿದೆ. ಶೋಷಿತ, ಬಡವ, ಶ್ರಮಿಕ, ಮಹಿಳೆಯರು ಸೇರಿದಂತೆ ಎಲ್ಲರಿಗೂ ಸಮಾನತೆಯ ಹಕ್ಕನ್ನು ನಮ್ಮ ಸಂವಿಧಾನ ಒದಗಿಸಿದೆ. ಪ್ರತಿಯೊಬ್ಬರು ನಮ್ಮ ಸಂಸ್ಕೃತಿ, ಧರ್ಮ ಹಾಗೂ ಇತಿಹಾಸವನ್ನು ಅರಿತುಕೊಳ್ಳಬೇಕು. ಬಸವಾದಿ ಶರಣರ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕು.”
– ಎಂ.ಬಿ.ಪಾಟೀಲ
ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವರು

ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ದೇಶಕ್ಕೆ ನೀಡಿದ ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನೊಳಗೊಂಡಿರುವ ಸಂವಿಧಾನವಾಗಿದೆ. ಎಲ್ಲ ವರ್ಗದ ಅಭ್ಯುದಯ, ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಇವ ನಾರವ, ಇವ ನಾರವ ಎಂದೆಣಿಸದಿರಯ್ಯ, ಇವ ನಮ್ಮವ, ಇವ ನಮ್ಮವ ಎಂದೇನಿಸಯ್ಯ ಎಂಬ ಬಸವಣ್ಣನವರ ವಚನದ ಆಶಯದಂತೆಯೇ ಎಲ್ಲರಿಗೂ ಸಮಾನ ಅವಕಾಶ ದೊರೆಯಬೇಕೆಂಬುದೇ ಸಂವಿಧಾನದ ಆಶಯವಾಗಿದೆ.”
– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

ಡಾ.ಅಂಬೇಡ್ಕರ್ ಛಾಯಾಚಿತ್ರಗಳ ಅನಾವರಣ
ವಿಜಯಪುರದಲ್ಲಿ ನವೀಕರಣಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿನ ಗ್ರಂಥಾಲಯ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಕುರಿತ ಸಂದೇಶ ಸಾರುವ ಛಾಯಾಚಿತ್ರಗಳನ್ನು ಅನಾವರಣಗೊಳಿಸಲಾಯಿತು. ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮೇಲುಸ್ತುವಾರಿ ಸಮಿತಿ ಸದಸ್ಯ ರಾಜು ಆಲಗೂರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ವಿವಿಧ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ಡಾ.ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ
ಜಯಂತಿ ಕಾರ್ಯಕ್ರಮಕ್ಕೂ ಮೊದಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಭವ್ಯ ಮೆರವಣಿಗೆಗೆ ಚಾಲನೆ
ನಗರದ ಜಲನಗರದ ಬುದ್ದವಿಹಾರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಬುದ್ಧವಿಹಾರದಿಂದ ಆರಂಭವಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಭವ್ಯ ಮೆರವಣಿಗೆಯೂ ವಿವಿಧ ಜಾನಪದ ಕಲಾತಂಡದೊಂದಿಗೆ, ನಗರದ ಬಾಗಲಕೋಟ ಕ್ರಾಸ್, ಕೆ.ಸಿ.ಮಾರ್ಕೆಟ್, ಮಹಾತ್ಮಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಅಂಬೇಡ್ಕರ್ ಭವದವರೆಗೆ ಸಾಗಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಅಭಿಷೇಕ ಚಕ್ರವರ್ತಿ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಗೆ ಸನ್ಮಾನ
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭವನ ನವೀಕರಣಕ್ಕೆ ವಿಶೇಷ ಮುತುವರ್ಜಿ ವಹಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಿ.ಎನ್.ಮಲಜಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ನಿರ್ಮಿತಿ ಕೇಂದ್ರದ ಆಕಾಶ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಮಾಣ ಪತ್ರ ನೀಡಲಾಯಿತು.

